ಮಂಗಳೂರು(ದಕ್ಷಿಣ ಕನ್ನಡ): ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.
ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್ (23) ಎಂದು ಗುರುತಿಸಲಾಗಿದೆ.

ಈತ ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಇದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ. ಆರೋಪಿಯ ತಾಯಿಯ ಮನೆ ಹಾಗೂ ಸಂತ್ರಸ್ತ ವಿದ್ಯಾರ್ಥಿನಿಯ ಮನೆ ಅಕ್ಕಪಕ್ಕದಲ್ಲಿದ್ದು, ಆರೋಪಿಯು ತನ್ನ ತಾಯಿಯ ಮನೆಗೆ ಹೋದ ಸಂದರ್ಭ ವಿದ್ಯಾರ್ಥಿನಿಯ ಪರಿಚಯವಾಗಿತ್ತು.
ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಯ ಮುಖ ಹಾಗೂ ಶರೀರದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ವಿದ್ಯಾರ್ಥಿನಿಯರ ಕೈಗಳಿಗೆ ಗಾಯಗಳಾಗಿವೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ವೈಫಲ್ಯ ಎಂದು ಕಂಡು ಬರುತ್ತಿದೆ. ಆರೋಪಿಯು ಕಾಲೇಜಿನ ಸಮವಸ್ತ್ರ ಧರಿಸಿದ್ದ ಎಂಬ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ಮಾಹಿತಿ ನೀಡಿದ್ದಾರೆ.
