Saturday, April 19, 2025
Google search engine

Homeರಾಜ್ಯಸುದ್ದಿಜಾಲಪೊಲೀಸರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಜಿಲ್ಲಾ ನ್ಯಾ. ಬಿ.ಎಸ್. ಭಾರತಿ ಸಲಹೆ

ಪೊಲೀಸರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಜಿಲ್ಲಾ ನ್ಯಾ. ಬಿ.ಎಸ್. ಭಾರತಿ ಸಲಹೆ

ಚಾಮರಾಜನಗರ: ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಹಾಗೂ ಸಬಲೀಕರಣಕ್ಕಾಗಿ ಪೊಲೀಸರು ಅಂತಃಕರಣದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ-ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ನಿಷೇಧ, ಫೋಕ್ಸೋ ಕಾಯ್ದೆ ಹಾಗೂ ಭ್ರೂಣಲಿಂಗ ಪತ್ತೆ ನಿಷೇಧ ಕುರಿತು ಪೊಲೀಸ್ ಅಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ. ಪೊಲೀಸರು ನೊಂದವರನ್ನು ಸ್ವಂತ ಕುಟುಂಬದವರಂತೆ ಭಾವಿಸಿ ದೌರ್ಜನ್ಯ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ ದೂರು ದಾಖಲಿಸಿಕೊಂಡು ಸಂತ್ರಸ್ಥರಿಗೆ ನ್ಯಾಯ ದೊರಕಿಸಲು ಮುಂದಾಗಬೇಕು ಎಂದರು. ಬೇಟಿ ಬಚಾವೋ-ಬೇಟಿ ಪಡಾವೋ ಸರ್ಕಾರದ ಉತ್ತಮವಾದ ಯೋಜನೆಯಾಗಿದೆ. ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಿ ಪೊಲೀಸರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಇದರಿಂದ ಮಾನವ ಹಕ್ಕುಗಳ ರಕ್ಷಣೆಯಾಗಲಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಗಳ ಕುರಿತು ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಅರಿವು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಭಾರತಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ ಅವರು ಮಾತನಾಡಿ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಹಲವಾರು ಕಾಯ್ದೆ ಜಾರಿಗೊಳಿಸಿದೆ. ಸಬಲೀಕರಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪೊಲೀಸರು ಸಂವೇದನಾಶೀಲತೆಯಿಂದ ಕಾರ್ಯನಿರ್ವಹಿಸಬೇಕು. ಹೆಣ್ಣುಮಕ್ಕಳ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ. ಶ್ರೀಧರ ಅವರು ಮಾತನಾಡಿ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ನಮ್ಮಲ್ಲಿರುವ ತಪ್ಪುಗ್ರಹಿಕೆಗಳನ್ನು ಹೋಗಲಾಡಿಸಲು ಕಾರ್ಯಗಾರದ ಅರಿವು ಅಧಿಕಾರಿಗಳಿಗೆ ಅತ್ಯಗತ್ಯವಾಗಿದೆ. ಪ್ರತಿಯೊಬ್ಬರು ಸಾಂವಿಧಾನಿಕ ಹಕ್ಕುಗಳನ್ನು ನೆಮ್ಮದಿಯಿಂದ ಅನುಭವಿಸಲು ಹಾಗೂ ಸಾಮಾಜಿಕ ಸ್ವಾಸ್ತ್ಯ ಕಾಪಾಡಲು ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಮಾತನಾಡಿ ಬಾಲ್ಯವಿವಾಹದಿಂದ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಭವಿಷ್ಯದ ಜೀವನ ಕಷ್ಟಸಾಧ್ಯವಾಗಲಿದೆ. ಪ್ರತಿಯೊಂದು ಕಾಯ್ದೆಗಳ ಅನುಷ್ಠಾನದಲ್ಲಿ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸಿ ಮಹಿಳೆಯರು ಮತ್ತು ಮಕ್ಕಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದರು.

ಆರಕ್ಷಕ ಉಪಾಧೀಕ್ಷರು ಹಾಗೂ ಮಕ್ಕಳ ಕಲ್ಯಾಣ ವಿಶೇಷ ಘಟಕದ ಹಿರಿಯ ಪೊಲೀಸ್ ಅಧಿಕಾರಿ ಲಕ್ಷ್ಮಯ್ಯ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಜೆ.ಆರ್. ದಿನೇಶ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಸರಸ್ವತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಸಿದ್ದಶೆಟ್ಟಿ, ಇತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular