ಬೆಂಗಳೂರು: ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಬರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಪೊಲೀಸ್ ಠಾಣೆಯ ಸ್ಥಾನಮಾನ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜತೆಗೆ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಬಂಧಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರ ಮತ್ತು ನೀಡುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸುವ ಅಧಿಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸಿಗಲಿದೆ. ಇದರಿಂದ ನಕಲಿ ಜಾತಿ ಪ್ರಮಾಣಪತ್ರ ಹಾವಳಿಗೆ ಕಡಿವಾಣ ಬೀಳಲಿದೆ ಎಂದರು. ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರೆ ಪರಿಶಿಷ್ಟ ಜಾತಿ ಮತ್ತು ಪಂಗಡ ಕವಲುದಾರಿಯಲ್ಲಿದೆ. ಯಾವುದೇ ಸರಕಾರವಾಗಲಿ ದೇಶದ ಅಭಿವೃದ್ಧಿ ಬಗ್ಗೆ ಮಾತನಾಡುತ್ತದೆ. ಎಸ್‌ಸಿ, ಎಸ್ಟಿ ಸಮುದಾಯದ ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂಬುದನ್ನು ಯಾರೊಬ್ಬರು ಚರ್ಚಿಸುವುದಿಲ್ಲ. ದೇಶದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ಕೊಡದೇ ಹೋಗಿದ್ದರೆ ಶೋಷಿತ ಸಮುದಾಯಗಳು ಯಾವ ಪರಿಸ್ಥಿತಿಯಲ್ಲಿ ಇರುತ್ತಿದ್ದವು ಎಂದು ಊಹಿಸಿಕೊಳ್ಳಲು ಅಸಾಧ್ಯ ಎಂದು ಆತಂಕ ವ್ಯಕ್ತಪಡಿಸಿದರು.
ಜಾತಿಗಣತಿ ವರದಿಯಲ್ಲಿ ಯಾವ ಜಾತಿಯ ಜನಸಂಖ್ಯೆ ಹೆಚ್ಚಿದ್ದಾರೆ, ಯಾವ ಜಾತಿ ಜನ ಕಡಿಮೆ ಇದ್ದಾರೆ ಎಂಬುದು ಅನಧಿಕೃತವಾಗಿ ಗೊತ್ತಾದ ತಕ್ಷಣ ಅಸಹನೆಯ ಮಾತು ಕೇಳಿ ಬರುತ್ತಿವೆ. ಜಾತಿಗಣತಿ ವರದಿಗೆ ತೀವ್ರ ವಿರೋಧವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದಾರೆ. ಈ ವರದಿಯನ್ನು ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸದನದಲ್ಲಿ ಮಂಡಿಸುವುದಾಗಿ ಹೇಳಿದ್ದಾರೆ ಎಂದು ಅವರು ತಿಳಿಸಿದರು.