ರಾಮನಗರ: ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಅವರು ಮಾ. ೧೫ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಜಿಲ್ಲೆಯಲ್ಲಿ ಮಾದರಿ ಪಬ್ಲಿಕ್ ಶಾಲೆಗಳನ್ನು ತೆರೆಯುವ ಸಂಬಂಧ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ೨೦ ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು, ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಎರಡು ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಾಂತ ೨೦೦೦ ಮಾದರಿ ಪಬ್ಲಿಕ್ ಶಾಲೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ ಹಾಗೂ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ೫ ಜನ ಸಚಿವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಆದುದರಿಂದ ಇಂದು ರಾಮನಗರ ಜಿಲ್ಲೆಗೆ ಐತಿಹಾಸಿಕ ದಿನ ಅಲ್ಲದೆ ಐತಿಹಾಸಿಕ ಪ್ರಯೋಗಕ್ಕೆ ಸಹಕಾರಿಯಾಗಿದೆ ಎಂದರು.
ಮಾದರಿ ಪಬ್ಲಿಕ್ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆ ಮಾಧ್ಯಮ, ಖಾಸಗಿ ಶಾಲೆಗಳ ಶಿಕ್ಷಕರಿಂದ ಮಾದರಿ ಪಬ್ಲಿಕ್ ಶಾಲೆ ಶಿಕ್ಷಕರಿಗೆ ತರಬೇತಿ, ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಗ್ರಂಥಾಲಯ, ಇಂಟರ್ ನೆಟ್ , ಆಧುನಿಕ ಪ್ರಯೋಗಾಯಗಳು, ಕಲೆ ಮತ್ತು ಸಂಗೀತ ತರಬೇತಿ, ಕ್ರೀಡೆ , ಊಟದ ಕೊಠಡಿ , ಶೌಚಾಲಯ, ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ. ಹಾಗೂ ಈ ಶಾಲೆಗಳು ಎರಡರಿಂದ ಮೂರು ಪಂಚಾಯಿತಿಗಳು ಸೇರಿ ಒಂದು ಮಾದರಿ ಪಬ್ಲಿಕ್ ಶಾಲೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಮಾದರಿ ಶಾಲೆಗಳನ್ನು ನಿರ್ಮಿಸಲು ನಾನು ನಮ್ಮ ಜಿಲ್ಲೆಯ ಉದ್ಯಮಿಗಳೊಂದಿಗೆ ಚರ್ಚಸಿದ್ದೇನೆ ಉದ್ಯಮಿಗಳು ಇದಕ್ಕೆ ಸಹಕಾರ ನೀಡಿದ್ದಾರೆ ಇನ್ನು ಅನೇಕ ಉದ್ಯಮಿಗಳು ಮಾದರಿ ಶಾಲೆಗಳನ್ನು ನಿರ್ಮಿಸಲು ಮುಂದೆ ಬಂದಿದ್ದಾರೆ ಇದು ಒಂದು ಸಂತೋಷದ ವಿಷಯ ಎಂದರು. ಮಾದರಿ ಪಬ್ಲಿಕ್ ಶಾಲೆಯ ಮಕ್ಕಳಿಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಗಳನ್ನು ಎದುರಿಸಲು ತರಬೇತಿಯನ್ನು ನೀಡಲಾಗುವುದು. ನಮ್ಮ ಜಿಲ್ಲೆಯ ಜನರು ಬೆಂಗಳೂರು ಸೇರಿದಂತೆ ಅನೇಕ ಕಡೆ ವಲಸೆ ಹೋಗುತ್ತಿದ್ದಾರೆ ಅನೇಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರುಗಳನ್ನು ಬಿಡುತ್ತಿದ್ದಾರೆ ಅವುಗಳನ್ನು ತಪ್ಪಿಸುವ ಸಲುವಾಗಿ ಮಾದರಿ ಪಬ್ಲಿಕ್ ಶಾಲೆಯನ್ನು ನಿರ್ಮಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ ಸುರೇಶ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧ್ಯಕ್ಷ ಎಚ್.ಸಿ. ಬಾಲಕೃಷ್ಣ, ರಾಮನಗರದ ವಿಧಾನಸಭಾ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್, ರವಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಮನಗರ ಜಿಲ್ಲೆಯ ಅಧ್ಯಕ್ಷ ಕೆ ರಾಜು, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ಅಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
