Sunday, April 20, 2025
Google search engine

Homeರಾಜಕೀಯಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ: ಡಿ.ಕೆ. ಸುರೇಶ್ ತಿರುಗೇಟು

ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ: ಡಿ.ಕೆ. ಸುರೇಶ್ ತಿರುಗೇಟು

ಬೆಂಗಳೂರು: ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರ, ಕಾಂಗ್ರೆಸ್​​ನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜೆಡಿಎಸ್ ಅವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.

ಆಸ್ಪತ್ರೆಯಿಂದ ಬಂದ ನಂತರ ಬಲಿಷ್ಠವಾಗಿ ಪ್ರಚಾರ ಮಾಡುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಟವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ ಎಂದು ಹೇಳಿದರು.

ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, ಜಾತ್ಯತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, ‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ’, ‘ಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆ’, ‘ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ’ – ಎಂಬೆಲ್ಲಾ ಹೇಳಿಕೆಗಳನ್ನು ಜನರಿಗೆ ತೋರಿಸಿ. ನಾನು ಮಾಡಿರುವ ಕೆಲಸಗಳಿಗೆ ನನ್ನ ಕ್ಷೇತ್ರದ ಜನತೆಯ ಬಳಿ ಕೂಲಿ ಕೇಳುತ್ತಿದ್ದೇನೆ. ಮಾಧ್ಯಮದವರು ನನಗೆ ಕೂಲಿ ಕೊಡಿಸುತ್ತೀರಾ ಎನ್ನುವ ಭಾವನೆ ಇದೆ  ಎಂದು ಹೇಳಿದರು.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಇಳಿಯುತ್ತಾರೆ ಎಂದಾಗ ನಮ್ಮ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ, ಗೆಲ್ಲುತ್ತಾರೆ. ನಾವು ಕೊಟ್ಟಿರುವ ಐದು ಗ್ಯಾರಂಟಿಗಳು, ಮುಂದಿನ ಐದು ವರ್ಷದಲ್ಲಿ ಈ ರಾಜ್ಯದ ಅಭಿವೃದ್ದಿಗೆ ನಾವು ಕೈಗೊಂಡಿರುವ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ  ಎಂದರು.

ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿ  ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ ಎಂದು ವ್ಯಂಗ್ಯವಾಡಿದರು.

RELATED ARTICLES
- Advertisment -
Google search engine

Most Popular