ಮಡಿಕೇರಿ: ಇದೇ ಮಾರ್ಚ್, ೨೫ ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶನದಂತೆ ಎಸ್‌ಒಪಿ ಮಾರ್ಗಸೂಚಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದರು.
ಪರೀಕ್ಷೆ ಕೇಂದ್ರಗಳಲ್ಲಿ ಸೂಕ್ತವಾದ ಪೀಠೋಪಕರಣ/ ಆಸನದ ವ್ಯವಸ್ಥೆ, ಕುಡಿಯಲು ಶುದ್ಧವಾದ ನೀರು ಮತ್ತಿತರ ಮೂಲ ಸೌಲಭ್ಯಗಳು ಇರಬೇಕು ಎಂದರು. ಪರೀಕ್ಷಾ ದಿನಗಳಂದು ಕೆಎಸ್‌ಆರ್‍ಟಿಸಿ ಬಸ್‌ನಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಬೇಕು/ಹೋಗಬೇಕು. ಪ್ರವೇಶ ಪತ್ರ ತೋರಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಬೇಕು ಎಂದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದು, ವೆಬ್‌ಕಾಸ್ಟ್ ಮಾಡುವುದು ಮತ್ತಿತರ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.