ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗಿದೆ. ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೈತಪ್ಪಿದ್ದು ಈ ಮಧ್ಯೆ ಅವರು ಕಾರ್ಯಕರ್ತರ ತುರ್ತು ಸಭೆ ಕರೆದಿದ್ದಾರೆ. ಬೆಂಬಲಿಗರ ಜೊತೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ.
ಬಿಜೆಪಿಯ ಮಂಡ್ಯ ಕ್ಷೇತ್ರದ ಟಿಕೆಟ್ ನನಗೆ ಸಿಗಲಿದೆ ಎಂದುಕೊಂಡಿದ್ದ ಸುಮಲತಾ ಅವರಿಗೆ ಮಂಡ್ಯದ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದೆ. ಮಂಡ್ಯ ಕ್ಷೇತ್ರ ಪಡೆದ ಜೆಡಿಎಸ್ ಟಿಕೆಟ್ ಘೋಷಣೆಗಾಗಿ ಚನ್ನಪಟ್ಟಣದಲ್ಲಿ ಸಭೆ ನಡೆಸುತ್ತಿದೆ. ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.
ಇಂದಿನ ಸಭೆಯಲ್ಲಿ ಸುಮಲತಾ ಅವರ ಮುಂದಿನ ನಡೆ ನಿರ್ಧಾರವಾಗಲಿದೆ. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಒಪ್ಪಿದರೆ ಅವರು ಮಂಡ್ಯದಿಂದ ಜೆಡಿಎಸ್ ಕಣಕ್ಕಿಳಿಸುವ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರಾ, ಅಥವಾ ಅವರು ಈ ಹಿಂದೆ ಹೇಳುತ್ತಿದ್ದಂತೆ ಪಕ್ಷೇತರರಾಗಿ ಸ್ಪರ್ಧಿಸುತ್ತಾರಾ ಎಂಬ ಸಂದೇಹ ಮೂಡಿದೆ.