ಚಾಮರಾಜನಗರ: ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದಲ್ಲಿ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶಿಷ್ಟ, ವಿನೂತನ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರ ಅಂಗವಾಗಿ ನಗರದ ಚಾಮರಾಜೇಶ್ವರ ದೇವಾಲಯದಿಂದ ಅರಂಭವಾದ ಮತದಾನ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ರ ಪ್ರಕಾಶ್ ಮೀನಾ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಂಟ್ರಾಕ್ಟರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಪಿ. ಲಕ್ಷ್ಮೀ ಅವರು ಬೃಹತ್ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಚಾಮರಾಜೇಶ್ವರ ದೇವಾಲಯದಿಂದ ಆರಂಭವಾಗಿ ನಗರದ ಬಿ. ರಾಚಯ್ಯ ಜೋಡಿರಸ್ತೆಯಲ್ಲಿ ಸಾಗಿದ ಜಾಗೃತಿ ಜಾಥಾದಲ್ಲಿ ಜಾನಪದ ಮಹಿಳಾ ಕಲಾತಂಡಗಳೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಂಡಿದ್ದರು. ರಸ್ತೆಯುದ್ದಕ್ಕೂ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯಗಳನ್ನು ಮೊಳಗಿಸಿ ಮತದಾನದ ಜಾಗೃತಿ ಮೂಡಿಸಿದರು. ಜಿಲ್ಲಾಡಳಿತ ಭವನದಲ್ಲಿ ಜಾಥಾ ಮುಕ್ತಾಯಗೊಂಡಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಪ್ರಮುಖ ಗಣ್ಯರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂವಿಧಾನಶಿಲ್ಪಿಗೆ ಗೌರವ ನಮನ ಸಲ್ಲಿಸಿದರು.