ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಏ.೧೫ ವಿಚಾರಣೆ ನಡೆಸಲಿದೆ.
ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿದೆ. ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ ೯ರಂದು (ಮಂಗಳವಾರ) ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸ್ವರಣಾ ಕಾಂತ ಶರ್ಮಾ ಅವರು ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು. ಅಲ್ಲದೇ, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು.
ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಬುಧವಾರ ಮೇಲ್ಮನವಿ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಏಪ್ರಿಲ್ ೧೫ರಂದು ವಿಚಾರಣೆ ನಡೆಸಲಿದೆ.