ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವು ವೈಯಕ್ತಿಕ ಕಾರಣಕ್ಕೆ ಆಗಿರೋದು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮರ್ಡರ್ ಆಗಿದ್ದರೂ ಅದು ವೈಯಕ್ತಿಕ ಕಾರಣಕ್ಕೆ ಆಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ನಮ್ಮ ಸರ್ಕಾರ ಅದನ್ನ ಮಾಡ್ತಿದೆ ಎಂದರು.
ಪ್ರಕರಣ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಸಿಎಂ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ.
ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದು ಬರೆದುಕೊಂಡಿದ್ದರು.