ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.
ಡಿವೈಎಸ್‌ಪಿ ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಆಗಮಿಸಿರುವ ಎಸ್‌ಐಟಿ ತಂಡ ಪರಿಶೀಲನೆ ನಡೆಸುತ್ತಿದೆ. ಮಹಿಳೆಯ ಸಮ್ಮುಖದಲ್ಲಿ, ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಮ್‌ನಲ್ಲಿ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ ಈ ಮೂರು ಕಡೆ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಮನೆಯಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಇದ್ದು, ಮನೆಯ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸ್ಥಳ ಮಹಜರು ವೇಳೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಪೊಲೀಸರು, ಇನ್ಸ್‌ಪೆಕ್ಟರ್ ಸುರೇಶ್‌ಕುಮಾರ್ ಹಾಗೂ ಸಬ್‌ಇನ್ಸ್‌ಪೆಕ್ಟರ್ ಅಜಯ್‌ಕುಮಾರ್ ಎಸ್‌ಐಟಿ ತಂಡಕ್ಕೆ ಸಹಕಾರ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಮನೆಯಲ್ಲಿದ್ದ ಸಿಪಿಯು, ಮಾನೀಟರ್, ಪ್ರಿಂಟರ್‌ನ್ನು ವಶಕ್ಕೆ ಪಡೆದಿದ್ದಾರೆ.