ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ? ಎಂದರು.
ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು ಎಂದು ಹೇಳಿದರು.
ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ನಾಯಕ ರಾಜೀವ್ ಗಾಂಧಿ ಅವರು. ಸಾವಿರಾರು ಯುವ ನಾಯಕರನ್ನು ಸಮಾಜಕ್ಕೆ ಕೊಡುಗೆ ಕೊಟ್ಟ, ಯುವ, ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸಿದವರು ಅವರು. ರಾಜೀವ್ ಗಾಂಧಿ ಅವರು ಪ್ರಧಾನಿಗಳಾಗಿದ್ದಾಗ ಕೆ.ಎಚ್.ಪಾಟೀಲರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಈ ವೇಳೆ ಸುಮಾರು ೭೦ ಕ್ಕೂ ಹೆಚ್ಚು ಯುವ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ರಾಜೀವ್ ಗಾಂಧಿ ಅವರು ನನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು, ನಂತರವೂ ನನ್ನ ಕ್ಷೇತ್ರಕ್ಕೆ ಭೇಟಿ ನೀಡಿದ್ದರು? ಎಂದು ನೆನಪಿಸಿಕೊಂಡರು.