Monday, April 21, 2025
Google search engine

Homeರಾಜಕೀಯಮೈಸೂರಿನ ಗ್ರಾಮಗಳಲ್ಲಿ ಕಾಲರಾ: ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ- ಸಿಎಂ ಸಿದ್ದರಾಮಯ್ಯ

ಮೈಸೂರಿನ ಗ್ರಾಮಗಳಲ್ಲಿ ಕಾಲರಾ: ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ,‌ ಇದಕ್ಕೆ ಕಲುಷಿತ ನೀರು ಕಾರಣ. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ. ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ,‌ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು‌ ಎಚ್ಚರಿಕೆ ನೀಡಿದರು.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ಇದೀಗ ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ, ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ‌, ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 114 ಮಂದಿ ಅಸ್ವಸ್ಥರಾಗಿದ್ದಾರೆ. ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಎಲ್ಲ ಜಿಲ್ಲಾಧಿಕಾರಿಗಳ ಜತೆ ಸಂವಾದ ನಡೆಸಿ ಆಡಳಿತಕ್ಕೆ ಚುರುಕು ಮುಟ್ಟಿಸಿದ್ದಾರೆ.

ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕ್​ಗಳ ಜತೆ ಸಮನ್ವಯ ವಹಿಸಿ ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ಬ್ಯಾಂಕ್​​ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

RELATED ARTICLES
- Advertisment -
Google search engine

Most Popular