Tuesday, April 22, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಮೂಲಕ ಸಂವಾದ

ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ವಿಡಿಯೋ ಮೂಲಕ ಸಂವಾದ

ಮಡಿಕೇರಿ : ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಆ ನಿಟ್ಟಿನಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆ.

ಬರ ನಿರ್ವಹಣೆ ಮತ್ತು ‘ಮುಂಗಾರು’ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅವರು ಮಾತನಾಡಿದರು. ರಾಜ್ಯಾದ್ಯಂತ ಈಗಾಗಲೇ ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವ ಹಿನ್ನೆಲೆ ಹಲವು ಕಡೆಗಳಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ದರಿಂದ ಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸುವುದು ಹಾಗೂ ರಸಗೊಬ್ಬರ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದರೂ ಸಹ, ಕೆಲವು ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಇದ್ದು, ಕುಡಿಯುವ ನೀರು ಸರಿಯಾಗಿ ಸರಬರಾಜು ಮಾಡಬೇಕು. ಜೊತೆಗೆ ಕುಡಿಯುವ ನೀರನ್ನು ಪ್ರತೀನಿತ್ಯ ಪರೀಕ್ಷಿಸಬೇಕು ಎಂದು ಮುಖ್ಯಮಂತ್ರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಇದೆ ಕೇಳಿ ಬರಬಾರದು. ಬೇಡಿಕೆಗೆ ಅನುಗುಣವಾಗಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಹೇಳಿದರು. ‘ಲೋಕಸಭಾ ಚುನಾವಣೆ ಹಿನ್ನೆಲೆ ಸುಮಾರು ಮೂರು ತಿಂಗಳ ಕಾಲ ಸುದೀರ್ಘ ಮಾದರಿ ನೀತಿ ಸಂಹಿತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಒಂದು ರೀತಿ ಮಂದಗತಿಯಲ್ಲಿ ಸಾಗಿದೆ. ಆದ್ದರಿಂದ ಚುನಾವಣಾ ಆಯೋಗವು ಕೆಲವು ವಿನಾಯಿತಿಯನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯದತ್ತ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.’

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಟೆಂಡರ್ ಆಹ್ವಾನಿಸಲು ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಚುನಾವಣಾ ಮಾದರಿ ನೀತಿ ಸಂಹಿತೆ ನೆಪ ಹೇಳಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸಿದರೆ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

‘ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಕಾಲರಾ ರೋಗದಿಂದ ಒಬ್ಬ ಯುವಕ ಮೃತಪಟ್ಟಿದ್ದಾನೆ. ಎಲ್ಲಾ ಹಂತದ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿದರೆ ಇಂತಹ ಪ್ರಕರಣಗಳು ಕಂಡು ಬರುವುದಿಲ್ಲ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ತಪ್ಪುಗಳು ನಡೆದಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.’

ಆಯಾಯ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು, ಎಂಜಿನಿಯರ್‍ಗಳು ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಕುಂದುಕೊರತೆ ಆಲಿಸಬೇಕು, ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು, ಅದನ್ನು ಬಿಟ್ಟು ಕಾಲಾಹರಣ ಮಾಡುವುದು ಸರಿಯೇ ಎಂದು ಮುಖ್ಯಮಂತ್ರಿ ಅವರು ಪ್ರಶ್ನಿಸಿದರು.

ರೈತರಿಗೆ ಸಕಾಲದಲ್ಲಿ ಬ್ಯಾಂಕ್‍ಗಳ ಮೂಲಕ ಸಾಲ ದೊರೆಯಬೇಕು. ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಅವರು ತಾಕೀತು ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡದಿದ್ದರೆ ಆಡಳಿತ ವ್ಯವಸ್ಥೆಗೆ ಏನೆನ್ನಬೇಕು ಎಂದು ಖಾರವಾಗಿ ನುಡಿದರು. ಶುದ್ಧ ಕುಡಿಯುವ ನೀರು ಪೂರೈಕೆ, ಕೃಷಿಕರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಬೇಕು. ಹೀಗೆ ಕೃಷಿ ಚಟುವಟಿಕೆ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸಬೇಕು ಎಂದು ಉಪ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದರು.

ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ, ಪೌರಾಡಳಿತ ಸಚಿವರಾದ ರಹೀಂ ಖಾನ್, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತಿಕ್ ಇತರರು ಇದ್ದರು.

ಬರ ನಿರ್ವಹಣೆ ಹಾಗೂ ಮುಂಗಾರು ಸಂಬಂಧ ಪೂರ್ವ ಸಿದ್ಧತೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಸಿಇಒ ಅವರಿಂದ ವಿಡಿಯೋ ಸಂವಾದ ಮೂಲಕ ಮಾಹಿತಿ ಪಡೆದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular