ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಮತ್ತು ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು ೮೦ ರಿಂದ ೮೫ ಕೋಟಿ ರೂ. ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ನಿಗಮದ ಅಧಿಕಾರಿಗಳು ನೀಡಿರುವ ದೂರನ್ನು ಆಧರಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಇತ್ತ ಎಸ್‌ಐಟಿ ನಡೆಸುತ್ತಿದೆ. ಅತ್ತ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.