ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ನಮಗೆ ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.