ಚಾಮರಾಜನಗರ: ನಾಳೆ ಬಕ್ರೀದ್ ಹಬ್ಬ ಆಚರಣೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರ ಅಧ್ಯಕ್ಷತೆಯಲ್ಲಿಂದು ಶಾಂತಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು ಈ ಹಿಂದಿನಿಂದಲೂ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಇದೇ ರೀತಿ ಈ ಬಾರಿಯೂ ಹಬ್ಬ ಆಚರಿಸುವಂತೆ ಮನವಿ ಮಾಡಿದರು. ತ್ಯಾಗದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಲಾಗುತ್ತಿದೆ. ಇದೇ ಪರಂಪರೆ ಜಿಲ್ಲೆಯಲ್ಲಿ ಮುಂದುವರೆಯಲಿ. ಹಬ್ಬಕ್ಕೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುತ್ತದೆ ಎಂದರು.
ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು, ನೈರ್ಮಲ್ಯ, ವಿದ್ಯುತ್ ಸೇರಿದಂತೆ ಯಾವುದೇ ಸೌಕರ್ಯಗಳಿಗೆ ಕೊರತೆಯಾಗದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಇದೇ ವೇಳೆ ಸೂಚನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಹಿಂದೆಯೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗಿದೆ. ಎಲ್ಲಿಯೂ ಸೌಹಾರ್ದತೆಗೆ ಭಂಗ ಬಂದಿಲ್ಲ. ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈದ್ಗಾ ಮೈದಾನ ಸೇರಿದಂತೆ ಪ್ರಾರ್ಥನಾ ಮಂದಿರಗಳ ಬಳಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು.
ಕಾನೂನು ಸುವ್ಯವಸ್ಥೆಗೆ ಎಲ್ಲರ ಸಹಕಾರ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಪ್ರಚೋದಾನಾತ್ಮಕ ಹೇಳಿಕೆಗಳಿಗೆ ಕಿವಿಗೊಡಬಾರದು. ವಿಶೇಷವಾಗಿ ಯುವ ಜನರಿಗೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಸಾಮರಸ್ಯದಿಂದ ಹಬ್ಬ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಸಹಕಾರ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರು ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆ, ಸಾಮರಸ್ಯ ಕಾಪಾಡಿಕೊಂಡು ಹಬ್ಬ ಆಚರಿಸಲಿದ್ದೇವೆ ಎಂದರು. ತಹಶೀಲ್ದಾರರಾದ ಐ.ಇ. ಬಸವರಾಜು, ಮಂಜುಳಾ, ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ. ರಾಜು, ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು, ಇತರೆ ಮುಖಂಡರು ಸಭೆಯಲ್ಲಿ ಹಾಜರಿದ್ದರು.