ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಹಿನ್ನೆಲೆ ದ.ಕ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗೂಗಲ್ ಫಾರ್ಮ್ ಮೂಲಕ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.
ಎರಡು ಬಾರಿಯ ವಿಧಾನಸಭೆ, ಎರಡು ಬಾರಿಯ ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದೆ. ಗ್ರಾಪಂ, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಕಳೆದ ಏಳು ವರ್ಷಗಳ ಅವಧಿಯಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್‌ರ ಬದಲಾವಣೆಗೆ ವಾಟ್ಸ್‌ಆ್ಯಪ್ ಗ್ರೂಪ್ ಮೂಲಕ ಅಭಿಯಾನ ಆರಂಭ ಮಾಡಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಸೋಲನ್ನು ಅನುಭವಿಸಿದ್ದು, ಹರೀಶ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂಬ ಅಭಿಪ್ರಾಯ ಸಂಗ್ರಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ತಳಮಟ್ಟದ ಕಾರ್ಯಕರ್ತರ ಮಧ್ಯೆ ಅಭಿಪ್ರಾಯ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಮುಕ್ತ ಚರ್ಚೆ ನಡೆದಿತ್ತು.ಆದರೆ ನೈತಿಕ ಹೊಣೆ ಹೊರಲು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹಿಂದೇಟು ಹಾಕಿದ್ದಾರೆ.
‘ಡಿಸಿಸಿ ಅಧ್ಯಕ್ಷರ ಬದಲಾವಣೆ ಹೋರಾಟ ಸಮಿತಿ’ ಎಂಬ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ ಅಭಿಯಾನ ಆರಂಭಿಸಲಾಗಿದೆ.
ಈ ಗ್ರೂಪ್‌ನಲ್ಲಿ 9 ಅಡ್ಮಿನ್‌ಗಳಿದ್ದಾರೆ. ಸದ್ಯ 722 ಮಂದಿ ಸದಸ್ಯರಾಗಿದ್ದಾರೆ. ಬಿರುಸಿನ ಚರ್ಚೆಯ ಜೊತೆಗೆ ಅಧ್ಯಕ್ಷ ಹರೀಶ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಲು ಆಗ್ರಹಿಸಲಾಗಿದೆ.