ಬೆಂಗಳೂರು: ರಾಜ್ಯದ ಹಲವೆಡೆ ಜೂನ್ ೧೩ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ.
ರಾಜ್ಯದಲ್ಲಿ ಇಂದು ಶನಿವಾರ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಸೇರಿ ೫ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ ೧೨ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.