ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅವಘಡದಲ್ಲಿ ಮೃತರ ಸಂಖ್ಯೆ ಹದಿನೈದಕ್ಕೆ ಏರಿಕೆಯಾಗಿದ್ದು ಜೊತೆಗೆ 60 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಅಸ್ಸಾಂನ ಸಿಲ್ಚಾರ್ ನಿಂದ ಕೋಲ್ಕತ್ತಾದ ಸೀಲ್ದಾಗೆ ಪ್ರಯಾಣಿಸುತ್ತಿದ್ದಾಗ ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ, ಈ ವೇಳೆ ಮೂರೂ ಬೋಗಿಗಳು ಜಖಂಗೊಂಡಿದ್ದು ಹದಿನೈದು ಮಂದಿ ಮೃತಪಟ್ಟಿದ್ದಾರೆ ಜೊತೆಗೆ ಅರುವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ನಡೆಸಲಾಗುತ್ತಿದೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟಿರುವವರಿಗೆ ಪ್ರಧಾನಿ ಮೋದಿ ‘X’ ನಲ್ಲಿ ಸಂತಾಪ ಸೂಚಿಸಿದ್ದು ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ಘೋಷಣೆ ಮಾಡಿದ್ದಾರೆ.
ಇನ್ನು ಅಪಘಾತಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಕೂಡ X ನಲ್ಲಿ ಪೋಸ್ಟ್ ಹಾಕಿ ಮೃತಪಟ್ಟಪಟ್ಟವರಿಗೆ ಸಂತಾಪ ಸೂಚಿಸಿದ್ದು, ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ” ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.