Saturday, April 19, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿನಿಲಯ, ವಸತಿ ಶಾಲೆಗಳ ಮೂಲಸೌಕರ್ಯ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಸೂಚನೆ

ವಿದ್ಯಾರ್ಥಿನಿಲಯ, ವಸತಿ ಶಾಲೆಗಳ ಮೂಲಸೌಕರ್ಯ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಸೂಚನೆ

ಚಾಮರಾಜನಗರ: ಜಿಲ್ಲೆಯ ವಿದ್ಯಾರ್ಥಿನಿಲಯ , ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಒದಗಿಸಿರುವ ಮೂಲಸೌಲಭ್ಯಗಳನ್ನು ಪರಿಶೀಲಿಸುವಂತೆ ಅರಣ್ಯ ಪರಿಸರ & ಜೀವಿಶಾಸ್ತ್ರ, ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣ, ಆಹಾರ ನೀಡಿ ಮಕ್ಕಳ ಕಲಿಕಾ ಪ್ರಕ್ರಿಯೆಯನ್ನು ವೃದ್ದಿಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ, ಮಕ್ಕಳ ಹಾಜರಾತಿ, ಆಹಾರ, ಅಡುಗೆಮನೆ ಹಾಗೂ ಶೌಚಾಲಯಗಳ ಸ್ವಚ್ಚತೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯ ಎಲ್ಲಾ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಕಡ್ಡಾಯವಾಗಿ ವಿಸಿಟರ್ ಪುಸ್ತಕಗಳನ್ನು ಇಡಬೇಕು. ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ಪರಿಶೀಲನೆ ಸಂಬಂಧಪಟ್ಟ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳ ಕರ್ತವ್ಯ ಮಾತ್ರವಲ್ಲ. ಎಲ್ಲಾ ಜಿಲ್ಲಾಮಟ್ಟದ ಇಲಾಖಾ ಅಧಿಕಾರಿಗಳು ಆಗಾಗ್ಗೆ ವಸತಿ ಶಾಲೆಗಳು, ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ ಅಲ್ಲಿನ ಕುಂದುಕೊರತೆಗಳ ಬಗ್ಗೆ ವಿಸಿಟರ್ ಪುಸ್ತಕದಲ್ಲಿ ನಮೂದಿಸುವಂತೆ ಉಸ್ತುವಾರಿ ಕಾರ್ಯದರ್ಶಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ರಸ್ತೆ, ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಅರಣ್ಯವಾಸಿಗಳಿಗೆ ತೊಂದರೆಯಾಗಬಾರದು. ಸಾಮಾಜಿಕ ಅರಣ್ಯ ವಿಭಾಗದಿಂದ ಜನರಿಗೆ ವಿತರಿಸುವ ಸಸಿಗಳು ಹಾಗೂ ರಸ್ತೆಬದಿ ನೆಡುತೋಪಗಳನ್ನು ಕ್ರಮಬದ್ಧವಾಗಿ ನಿರ್ವಹಿಸಬೇಕು ಎಂದರು.

ಶಾಲಾ ಕೊಠಡಿ, ಸುತ್ತುಗೋಡೆ, ಅಂಗನವಾಡಿ ಕಟ್ಟಡಗಳು, ಶೌಚಾಲಯಗಳ ದುರಸ್ಥಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಎಲ್ಲಾ ಇಲಾಖೆಗಳು ಕೆ.ಟಿ.ಪಿ.ಪಿ. ನಿಯಾಮಾನುಸಾರ ನಿಗದಿತ ಅವಧಿಯಲ್ಲಿ ಟೆಂಡರ್ ಕರೆಯುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಟೆಂಡರ್ ಪ್ರಕ್ರಿಯೆ ಮುಗಿಸಿ ಅಭಿವೃದ್ಧಿಗೆ ವೇಗ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿದೆ. ಮುಂದೆಯೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ಅಗತ್ಯ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್. ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆಡಳಿತವನ್ನು ಚುರುಕುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಿಂದ ಕುಡಿಯುವ ನೀರಿನ ಪರಿಸ್ಥಿತಿ ಸುಧಾರಿಸಿದೆ. ಆರ್.ಒ ಪ್ಲಾಂಟ್‍ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಈ ಬಾರಿ ಬಾಳೆಬೆಳೆ ಸಾಕಷ್ಟು ನಷ್ಟವಾಗಿದ್ದು, ಫಸಲ್ ಭಿಮಾ ಯೋಜನೆಗೆ ಬಾಳೆ ಹಾಗೂ ತೆಂಗು ಬೆಳೆಯನ್ನು ಒಳಪಡಿಸಿದರೆ ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ, ಜಿಲ್ಲೆಯಲ್ಲಿ ಅರಿಶಿಣ ಸಂಸ್ಕರಣಾ ಹಾಗೂ ಈರುಳ್ಳಿ ಶೇಖರಣಾ ಘಟಕ ತೆರೆಯಲು ಯೋಜನಾ ವರದಿ ಸಿದ್ದಪಡಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಬಿಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ. ಕಾಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್‍ಕುಮಾರ್, ಕಾವೇರಿ ವ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular