ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.
ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‌ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ ೧೯೬೧ ರ ವಿಧಿ ೧೧ ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಆಕ್ಟ್ ೨೦೦೫ರ ಕಲಂ ೩೩, ಮೋಟಾರು ವಾಹನಗಳ ಕಾಯ್ದೆ ೧೯೮೮ ರ ಕಲಂ ೧೧೫ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು ೧೯೮೯ ರ (ತಿದ್ದುಪಡಿ ನಿಯಮಾವಳಿ ೧೯೯೦) ನಿಯಮ ೨೨೧-ಎ(೫) ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರು ವಾಹನ ಸವಾರರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ, ೦೧ ರಿಂದ ಜುಲೈ ೩೦ ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ೨೭೫ ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ ೨೪ ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.