Saturday, April 19, 2025
Google search engine

Homeರಾಜ್ಯಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಹಾಗೂ ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿತ್ತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್ಗಳಲ್ಲಿ ಶೇಕಡಾ ೮೦ ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ನಾರಾಯಣಗೌಡ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವಂಥ ಸ್ಥಿತಿಗೆ ಬಂದಿರುವುದೇ ನಾಚಿಕೆಗೇಡು. ಕನ್ನಡಿಗರು ಶಾಂತಿಪ್ರಿಯರಾಗಿರುವ ಕಾರಣ ಅನ್ಯರು ಸವಾರಿ ಮಾಡುತ್ತಿದ್ದಾರೆ. ಕನ್ನಡಿಗರು ಈಗ ಒಂದಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ. ಕನ್ನಡಿಗರ ಹಕ್ಕುಗಳನ್ನು ಹೊರ ರಾಜ್ಯಗಳಿಂದ ಬಂದವರು ಅನುಭವಿಸುತ್ತಿದ್ದು, ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುತ್ತಿದ್ದಾರೆ. ಈಗ ನಾವು ಸಿಡಿದು ನಿಲ್ಲದೇ ಹೋದಲ್ಲಿ ಖಂಡಿತ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದೆ. ಅದೇ ರೀತಿ ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ಸೇರಿದಂತೆ ಅನೇಕ ಕಲಾವಿದರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

RELATED ARTICLES
- Advertisment -
Google search engine

Most Popular