ಬೆಂಗಳೂರು: ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ, ಸರಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.
ಬೆಂಗಳೂರಿನಿಂದ ಮೈಸೂರುವರೆಗೆ ಜೆಡಿಎಸ್ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾತನಾಡಿದರು.
ನಿಮ್ಮ ಸರ್ಕಾರವನ್ನು ಯಾರೂ ಅಸ್ಥಿರ ಮಾಡಿಕೊಳ್ಳುತ್ತಿಲ್ಲ. ನೀವೇ ಜನರು ಕೊಟ್ಟ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ. ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಿದ್ದೀರಿ. ಈಗ ನೋಡಿದರೆ ಜೆಡಿಎಸ್ ಬಿಜೆಪಿ ಪಕ್ಷಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೊರಟಿದ್ದೀರಿ ಎಂದು ಅವರು ವಾಗ್ದಾಳಿ ನಡೆಸಿದರು.
ಇದು ಅತ್ಯಂತ ಭ್ರಷ್ಟ, ಕೆಟ್ಟ ಸರಕಾರ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರಕಾರವನ್ನು ಕಾಣುತ್ತಿದ್ದೇವೆ ಎಂದು ಕೇಂದ್ರ ಸಚಿವರು ದೂರಿದರು.
ಈ ಕೆಟ್ಟ ಕಾಂಗ್ರೆಸ್ ಜನ ವಿರೋಧಿ ಸರಕಾರ ವಿರುದ್ಧ ನಾವು ಜಂಟಿ ಹೋರಾಟ ಹಮ್ಮಿಕೊಂಡಿದ್ದೇವೆ. ಜನರಿಗೆ ಇವರ ಆಕ್ರಮಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಆದಿಶಕ್ತಿ ತಾಯಿ ಕೆಂಪಮ್ಮ ದೇವಿಗೆ ಪೂಜೆ ಸಲ್ಲಿಸಿ ಯಡಿಯೂರಪ್ಪನವರ ಇನ್ನಿತರೆ ಮಾರ್ಗದರ್ಶಕರ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ. ನಾಡಿನ ಜನತೆಯ ಅಭಿಪ್ರಾಯ ಏನಿದೆ ಅದರ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಅವರು ಕಿಡಿಕಾರಿದರು.