Sunday, April 20, 2025
Google search engine

Homeರಾಜ್ಯಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ

ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ

ಬೆಂಗಳೂರು : ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ ೫ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಡೀ ಪ್ರದೇಶದಲ್ಲಿ ಒಂದು ಸುತ್ತು ಬಂದ ಡಿಸಿಎಂ ಶಿವಕುಮಾರ್ ಅವರು ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಚಗೊಳಿಸಬೇಕು ಎಂದು ಹೇಳಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿ ಮಾತನಾಡಿದ ಅವರು ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಚತೆಯಲ್ಲಿ ನಿರ್ಲಕ್ಷ್ಯವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್ ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರಿದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಲಾಗಿದೆ ಎಂದರು.

ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಳಾಗಿವೆ. ಇವುಗಳನ್ನು ಕೂಡಲೇ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರಿಗೂ ಎಲ್ಲಿಲ್ಲಿ ರಸ್ತೆಗುಂಡಿಗಳಿವೆ ಅದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇನೆ. ಈಗಾಗಲೇ ನೂತನ ಆಪ್ ಅನ್ನು ಬಿಡುಗಡೆ ಮಾಡಿದ್ದು ಅಲ್ಲಿ ಫೋಟೊ ತೆಗೆದು ಹಾಕಿದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಂಚಾರಿ ಪೊಲೀಸರೆ ಹೆಚ್ಚು ಕೆಲಸ ಮಾಡುತ್ತಿದ್ದು ಬಿಬಿಎಂಪಿ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಬರುತ್ತಿಲ್ಲ ಎಂದು ಕೇಳಿದಾಗ ?ಇದರ ಬಗ್ಗೆ ಗಮನ ನೀಡಲಾಗುವುದು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಕಸ ಹೆಚ್ಚಾಗಿದೆ ಇದರ ತೆರವಿನ ಬಗ್ಗೆ ಗಮನ ನೀಡಲಾಗುವುದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular