ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಇದರ ವಿರುದ್ಧ ರಾಜಕೀಯ ಹೋರಾಟ ಮಾಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಖಂಡ್ರೆ ಒತ್ತಾಯಿಸಿದ್ದಾರೆ.