Sunday, April 20, 2025
Google search engine

Homeಸ್ಥಳೀಯಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ರೂಪಿಸಿ: ವೆಂಕಟ್ ರಾಜಾ

ಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ರೂಪಿಸಿ: ವೆಂಕಟ್ ರಾಜಾ


ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಂಪನ್ಮೂಲಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿ ಮಾಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ವೆಂಕಟ್ ರಾಜಾ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರವಾಸೋದ್ಯಮ ಕ್ಷೇತ್ರದ ಜೊತೆಗೆ, ಆಹಾರ ಉತ್ಪಾದನೆ, ಹಾಸ್ಪಿಟಾಲಿಟಿ, ಕೃಷಿ ಕೌಶಲ್ಯ, ವಾಣಿಜ್ಯ, ಹೀಗೆ ವಿವಿಧ ರೀತಿಯ ವೃತ್ತಿ ಕೌಶಲ್ಯ ತರಬೇತಿಯನ್ನು ಯುವಜನರಿಗೆ ನೀಡಿ, ಉದ್ಯೋಗ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಉದ್ಯೋಗಾಧಾರಿತ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದರು.
ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಮಾಜಿಕ ಅರಣ್ಯ, ಹಿಂದುಳಿದ ವರ್ಗ, ಹೀಗೆ ಹಲವು ಇಲಾಖೆಗಳ ವ್ಯಾಪ್ತಿಯಲ್ಲಿ ವೃತ್ತಿಪರ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವ್ಯಾಸಂಗ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳ ಸಂಖ್ಯೆ ಹಾಗೂ ಲಭ್ಯವಿರುವ ಕೋರ್ಸ್‌ಗಳ ಮಾಹಿತಿಯನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಎಂ.ಧನಂಜಯ ಜಿಲ್ಲೆಯಲ್ಲಿ ಬಾಳೆ ಕೃಷಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಬಾಳೆ ದಿಂಡಿನಿಂದ ಬಟ್ಟೆ ತಯಾರು ಮಾಡಬಹುದಾಗಿದ್ದು, ಇದರಿಂದ ಉದ್ಯೋಗ ಕಲ್ಪಿಸುವತ್ತ ಚಿಂತಿಸಬೇಕಿದೆ ಎಂದು ಸಲಹೆ ಮಾಡಿದರು.ಯುವಜನರಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ, ಕೌಶಲ್ಯ ಆಧಾರಿತ ವೃತ್ತಿ ತರಬೇತಿ ನೀಡುವಂತಾಗಬೇಕು. ಉದ್ಯೋಗ ಮೇಳದ ಸಂದರ್ಭದಲ್ಲಿ ಯುವಜನರಿಗೆ ಆಸಕ್ತಿ ಇರುವ ಕ್ಷೇತ್ರದ ಕಂಪನಿಗಳನ್ನು ಆಹ್ವಾನಿಸಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಹೇಳಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಮ್ಮ ಸಲಹೆಗಳನ್ನು ಕ್ರಿಯಾಯೋಜನೆಯಲ್ಲಿ ಸೇರ್ಪಡೆ ಮಾಡಿ, ಸ್ಥಳೀಯ ಬೇಡಿಕೆಗೆ ತಕ್ಕಂತೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಯುವ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹಲವು ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ವಿವಿಧ ಸಂಘ ಸಂಸ್ಥೆಗಳ ಹಮ್ಮಿಕೊಳ್ಳಬೇಕಿದೆ ಎಂದು ಸಲಹೆ ಮಾಡಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಸಿ.ಎಂ.ಉಮಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಂತೆ ಜಾಬ್ ರೋಲ್‌ಗಳನ್ನು ಗುರುತಿಸಲಾಗಿದೆ. ಅದರಂತೆ ಪ್ರಸಕ್ತ ಸಾಲಿನಲ್ಲಿ ವೃತ್ತಿ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದರು. ಈ ಹಿಂದೆ ಗೋಣಿಕೊಪ್ಪ, ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಸುಮಾರು ೫೫ ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಚಿಕ್ಕಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ನಗರದ ಸದ್ಗುರು ತರಬೇತಿ ಸಂಸ್ಥೆ ನೋಂದಣಿ ಮಾಡಿಕೊಂಡಿವೆ ಎಂದು ಹೇಳಿದರು.
ಪ್ರಸಕ್ತ ಸಾಲಿಗೆ ಜಿಲ್ಲಾ ಕೌಶಲ್ಯಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ದಪಡಿಸುವ ಬಗ್ಗೆ ಅನುಮೋದನೆ ಪಡೆಯಲಾಯಿತು.
ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಲಿಂಗರಾಜು, ಉಪ ನಿರ್ದೇಶಕರಾದ ರಘು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಡಿಡಿಪಿಐ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ವಿಜಯ, ತಹಶೀಲ್ದಾರರಾದ ಎಸ್.ಎನ್.ನರಗುಂದ, ಬಿಸಿಎಂ ಅಧಿಕಾರಿ ಮಂಜುನಾಥ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.

RELATED ARTICLES
- Advertisment -
Google search engine

Most Popular