Friday, September 12, 2025
Google search engine

Homeಅಪರಾಧವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು: ವಿವಾಹ ಆಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪುತ್ತೂರು ಕಬಕದ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದವ. ಈತನ ಜೊತೆಗೆ ಈತನ ತಂದೆ ರಾಮಣ್ಣ ಪೂಜಾರಿ (62) ಮತ್ತು ಬಾವ ನಿಖಿತಾಶ್ ಸುವರ್ಣ (40) ಎಂಬಾತನಿಗೂ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿವರ: ನಿತೇಶ್ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಸುತ್ತಾಡಿಸಿ, ಬಳಿಕ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ಲದೇ, ಆಕೆಯ ಮನೆಗೂ ಹೋಗಿ ಅತ್ಯಾಚಾರ ನಡೆಸಿದ್ದ. ಬಳಿಕ ಯುವತಿ ವಿವಾಹವಾಗಲು ಕೇಳಿಕೊಂಡಾಗ ಆತ ನಿರಾಕರಿಸಿದ್ದ. ಪರಸ್ಪರ ಜಾತಿ ಬೇರೆಯಾಗಿರುವುದರಿಂದ ತಂದೆ ಮತ್ತು ಬಾವ ಮದುವೆಗೆ ಒಪ್ಪುತ್ತಿಲ್ಲ ಎಂದು ಹೇಳಿದ್ದ. ನಿತೇಶ್‌ನ ತಂದೆ ಮತ್ತು ಬಾವನ ಬಳಿ ಕೇಳಿಕೊಂಡಾಗಲೂ ಅವರು ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆಯನ್ನು ಹಾಕಿದ್ದರು ಎಂದು ಸಂತ್ರಸ್ತ ಯುವತಿ 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್ಸ್‌ಪೆಕ್ಟರ್ ತಿಮ್ಮಪ್ಪ ನಾಯಕ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ. ಅವರು ಆರೋಪಿಯ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಅಪರಾಧಿ ನಿತೇಶ್‌ಗೆ ಭಾರತೀಯ ದಂಡ ಸಂಹಿತೆಯ ಕಲಂ 376 (2) (ಎನ್) ಅಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ಕಲಂ 418ರ ಅಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ರಾಮಣ್ಣ ಪೂಜಾರಿ ಮತ್ತು ನಿಖಿತಾಶ್‌ಗೆ ಭಾರತೀಯ ದಂಡ ಸಂಹಿತೆಯ ಕಲಂ 504 ರಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಭಾ.ದಂ.ಸ ಕಲಂ 506ರಡಿ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ, ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಕೆಲವು ಸಾಕ್ಷಿಗಳ ವಿಚಾರಣೆಯನ್ನು ಸರ್ಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ನಡೆಸಿದ್ದರು. ಅನಂತರ ಸರ್ಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಉಳಿದ ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು. ಒಟ್ಟು 16 ಮಂದಿ ಸಾಕ್ಷಿದಾರರನ್ನು ವಿಚಾರಣೆ ನಡೆಸಿ, 88 ದಾಖಲೆಗಳನ್ನು ಕಲೆ ಹಾಕಲಾಗಿತ್ತು.

RELATED ARTICLES
- Advertisment -
Google search engine

Most Popular