ಬೆಂಗಳೂರು: ನಟ ದರ್ಶನ್ ತೂಗುದೀಪ ಸೇರಿದಂತೆ ೧೬ ಮಂದಿ ಆರೋಪಿಗಳಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಜಾರ್ಜ್ ಶೀಟ್ ವಿವರಗಳು ಸಾರ್ವಜನಿಕವಾಗಿ ಬಟಾ ಬಯಲು ಆಗುವುದರಿಂದ ನ್ಯಾಯಾಲಯದ ಪ್ರಕ್ರಿಯೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.
ಹೊರ ಬರುವ ಆರೋಪಪಟ್ಟಿ ಮಾಹಿತಿಯು ಮುಂದಿನ ತನಿಖೆಯ ಮೇಲೆ ಯಾವುದೇ ಪ್ರಭಾವ ಬೀರಲಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಕರಣದ ವಿಚಾರಣೆ ಮುಂದುವರಿಯಲಿದೆ. ಸಾರ್ವಜನಿಕವಾಗಿ ಯಾರಾದರೂ ಏನಾದರೂ ಮಾತನಾಡುತ್ತಾರೆ ಎಂಬ ಕಾರಣಕ್ಕೆ ನ್ಯಾಯಾಲಯ ಅದನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಅವರು ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಸುತ್ತಾರೆ ಎಂದರು.
ಕಳೆದ ವಾರ ಪೊಲೀಸರು ಪ್ರಕರಣದ ೩,೯೯೧ ಪುಟಗಳ ಪ್ರಾಥಮಿಕ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.