ಗುಂಡ್ಲುಪೇಟೆ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಗತಗೌಡನಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಅಗತಗೌಡನಹಳ್ಳಿ ಗ್ರಾಮದ ಮಾದೇಶ್(23) ಮೃತ ಯುವಕ. ರಾತ್ರಿ ವೇಳೆ ಅತೀ ವೇಗದಿಂದ ಬರುತ್ತಿದ್ದ ಪರಿಣಾಮ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದ್ದು, ಘಟನೆ ಮಾಹಿತಿ ಅರಿತ ಬೇಗೂರು ಠಾಣೆ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ನಂತರ ಎರಡು ವಾಹನಗಳನ್ನು ವಶಕ್ಕೆ ಪಡೆದ ಬೇಗೂರು ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತಕ್ಕೆ ಬ್ರೇಕ್ ಹಾಕಿ: ಗುಂಡ್ಲುಪೇಟೆ-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾರದಲ್ಲಿ ಎರಡರಿಂದ ಮೂರು ಅವಘಾತಗಳು ಸಂಭವಿಸುತ್ತಲೇ ಇರುತ್ತವೆ. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರಿ ಹಾಗು ಪೊಲೀಸರು ಅತೀ ವೇಗಕ್ಕೆ ಕಡಿವಾಣ ಹಾಕುವ ಜೊತೆಗೆ ಹಂಪ್ ಗಳನ್ನು ನಿರ್ಮಾಣ ಮಾಡಬೇಕೆಂದು ವಾಹನ ಸವಾರರು ಒತ್ತಾಯ ಮಾಡಿದ್ದಾರೆ.