ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ತಿರುವು ಸಿಕ್ಕಿದ್ದು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಕರ್ತವ್ಯ ನಿರತ ಸಬ್‌ಇನ್ಸ್‌ಪೆಕ್ಟರ್ ಓರ್ವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ಎಸ್‌ಐಟಿ ಗುರುವಾರ ಸಂಜೆ ಬಂಧಿಸಿದೆ. ಇನ್ಸ್‌ಪೆಕ್ಟರ್ ಅಯ್ಯಣ್ಣ ರೆಡ್ಡಿ ಬಂಧನವನ್ನು ಎಸ್‌ಐಟಿ ಮೂಲಗಳು ಕೂಡ ಖಚಿತಪಡಿಸಿವೆ. ಹನಿಟ್ರ್ಯಾಪ್ ಪ್ರಕರಣದಲ್ಲಿ ಸಹಕಾರ ನೀಡಿದ ಆರೋಪದ ಮೇಲೆ ಅಯ್ಯಣ್ಣ ರೆಡ್ಡಿಯವರನ್ನು ಬಂಧಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆ ಮೂಲಕ ಮುನಿರತ್ನ ಪ್ರಕರಣದಲ್ಲಿ ಮಹತ್ವದ ತಿರುವು ಪಡೆದಿದೆ.
ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್‌ಗೆ ಇನ್‌ಸ್ಪೆಕ್ಟರ್ ನೆರವು ನೀಡಿದ್ದರು. ಅಲ್ಲದೇ, ಆರೋಪಿಗಳು ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಇನ್‌ಸ್ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರೆಂಬ ಆರೋಪದ ಅಡಿ ಬಂಧಿಸಲಾಗಿದೆ’ ಎಂದು ತಿಳಿದು ಬಂದಿದೆ.
ಆರೋಪಿ ಸಬ್ ಇನ್ಸ್‌ಪೆಕ್ಟರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿರುವು ದಾಗಿ ತಿಳಿದು ಬಂದಿದೆ.
ಏನಿದು ಪ್ರಕರಣ: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಪ್ರಕರಣ ಸಂಬಂಧ ಅಕ್ಟೋಬರ್ ೧೫ರಂದು ಬೆಂಗಳೂರಿನ ೪೨ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ. ಕಗ್ಗಲೀಪರ ಪೊಲೀಸ್ ಠಾಣೆಯಲ್ಲಿ ಸುಮಾರು ೪೦ ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಶಾಸಕರ ಮೇಲೆ ಎಫ್‌ಐಆರ್ ದಾಖಲಾಗಿತ್ತು.
ರಾಮನಗರದ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರು ವಿರುದ್ಧ ೪೦ ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದರು. ಅಲ್ಲದೇ, ಪ್ರಕರಣದಲ್ಲಿ ೭ ಮಂದಿಯ ವಿರುದ್ಧ ಎಫ್‌ಐಆರ್ ಆಗಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವರ್ಗಾವಣೆ ಮಾಡಿದೆ. ಇದಕ್ಕೂ ಮುನ್ನ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧ ಒಕ್ಕಲಿಗ ಹಾಗೂ ದಲಿತ ಸಂಘಟನೆಗಳು ರಾಜ್ಯದಾದ್ಯಂತ ಭಾರೀ ಪ್ರತಿಭಟನೆ ನಡೆಸಿದ್ದವು.