ಚಾಮರಾಜನಗರ: ದೋಷರಹಿತ ಭಾವಚಿತ್ರವಿರುವ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿ ಹಾಗೂ ಸಮರ್ಪಕವಾಗಿ ನಿರ್ವಹಿಸುವಂತೆ ಚಾಮರಾಜನಗರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾಗಿರುವ ಮೇಜರ್ ಪಿ. ಮಣಿವಣ್ಣನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೊಳ್ಳೇಗಾಲ ಪಟ್ಟಣದ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತ ಪ್ರಕ್ರಿಯೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸುತ್ತಿರುವ ಸಂಬಂಧ ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿದ್ದು, ಈ ಕುರಿತು ವಹಿಸಲಾಗಿರುವ ಕ್ರಮಗಳ ಸಂಬಂಧ ವಿವರ ಪರಿಶೀಲಿಸಿದ ಮತದಾರರ ಪಟ್ಟಿ ವೀಕ್ಷಕರು ದೋಷರಹಿತ ಮತದಾರರ ಪಟ್ಟಿ ತಯಾರಿಸಲು ನಿಯೋಜಿತ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ೯೮೩ ಮತಗಟ್ಟೆಗಳ ಪೈಕಿ ಇನ್ನೂ ೩೯ ಮತಗಟ್ಟೆಗಳಿಗೆ ಇಂಟರ್‌ನೆಟ್ ಸಂಪರ್ಕ ಕಲ್ಪಿಸಬೇಕಿದೆ. ಇಂಟರ್‌ನೆಟ್ ಸಂಪರ್ಕ ಕಲ್ಪಿಸಲು ಬಿ.ಎಸ್.ಎನ್.ಎಲ್ ಹಾಗೂ ಅರಣ್ಯ ಅಧಿಕಾರಿಗಳು ಕ್ರಮವಹಿಸಬೇಕು. ಇದಕ್ಕಾಗಿ ಸಂಬಂಧಪಟ್ಟ ಇತರೆ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ನೊಂದಾಯಿಸಬೇಕು. ಈ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ಅನುಸರಿಸಬೇಕು. ಹೆಚ್ಚಿನ ಮುತುವರ್ಜಿ ವಹಿಸಿ ಯುವ ಮತದಾರರು ಪಟ್ಟಿಗೆ ಸೇರ್ಪಡೆಗೊಳಿಸುವಲ್ಲಿ ಅಧಿಕಾರಿಗಳು ನಿಯಮಾನುಸಾರ ಮುಂದಾಗಬೇಕು ಎಂದರು.
ಕರಡು ಮತದಾರರ ಪಟ್ಟಿಯಲ್ಲಿ ಇರುವ ಲಿಂಗಾನುಪಾತ ಸಂಖ್ಯೆಯನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು. ಮರಣ ಹೊಂದಿದವರ ಹೆಸರುಗಳು ಪಟ್ಟಿಯಿಂದ ಕೈಬಿಡಲಾಗಿದೆಯೇ ಎಂಬ ಬಗ್ಗೆಯೂ ಖಾತರಿಪಡಿಸಿಕೊಳ್ಳಬೇಕು. ವಿಧಾನಸಭಾವಾರು ಜನಸಂಖ್ಯಾನುಸಾರ ದಾಖಲಾಗಿರುವ ಅಂಕಿ ಅಂಶಗಳ ಬಗ್ಗೆಯೂ ಪರಿಶೀಲಿಸಬೇಕು. ಭೌತಿಕವಾಗಿ ಮತ್ತು ಭೇಟಿ ನೀಡುವ ಮೂಲಕ ನಿಖರ ವಿವರಗಳನ್ನು ದಾಖಲು ಮಾಡಬೇಕು ಎಂದು ತಿಳಿಸಿದರು.
ಬುಡಕಟ್ಟು ಗಿರಿಜನ ಅರಣ್ಯದಂಚಿನ ಪ್ರದೇಶಗಳಲ್ಲಿಯೂ ಅರ್ಹರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಅರ್ಹರು ಮತದಾರರ ಪಟ್ಟಯಿಂದ ಹೊರಗುಳಿಯಬಾರದು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯವನ್ನು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕೈಗೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾಗಿರುವ ಮೇಜರ್ ಪಿ. ಮಣಿವಣ್ಣನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಮಾತನಾಡಿ ಯುವ ಮತದಾರರ ನೊಂದಣಿಗಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿ ಸಂಬಂಧ ೨೦೨೪ರ ನವೆಂಬರ್ ೨೮ರವರೆಗೂ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದೆ. ಡಿಸೆಂಬರ್ ೨೪ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರರ ಪಟ್ಟಿಯನ್ನು ೨೦೨೫ರ ಜನವರಿ ೬ ರಂದು ಪ್ರಕಟಿಸಲಾಗುತ್ತದೆ ಎಂದು ವಿವರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಬಿ.ಆರ್. ಮಹೇಶ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ತೋಟೇಶ್, ರೇವಣ್ಣ, ತಹಶೀಲ್ದಾರರಾದ ಬಸವರಾಜು, ಜಯಪ್ರಕಾಶ್, ಗುರುಪ್ರಸಾದ್, ಗಿರಿಜಾ, ರಮೇಶ್ ಬಾಬು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮೇಶ್, ಪೂರ್ಣಿಮಾ, ಷಣ್ಮುಗಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕರಾದ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.