ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಅಲ್ಲದೆ ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಬಿಜೆಪಿ ಶಿಸ್ತು ಸಮಿತಿ ನೋಟಿಸ್ನಲ್ಲೇನಿದೆ?
ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಉತ್ತರಿಸಲು ಯತ್ನಾಳ್ಗೆ 10 ದಿನಗಳ ಗಡುವು
ಮುಂದುವರಿದು, ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್ನಲ್ಲಿ ಉಲ್ಲೇಖಿಸಲಾಗಿದೆ.