ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಸಮಿತಿಯ ಮಹಾಪೊ ಷಕರಾಗಿ ಕಾರ್ಯನಿರ್ವಹಿಸುವಂತೆ ಮತ್ತು ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿದರು.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕರುಗಳು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಸರಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳಿಂದ ಅನುದಾನ ಕೊಡಿಸುವುದಲ್ಲದೆ ಜಿಲ್ಲಾ ಮಟ್ಟದಲ್ಲಿಯೂ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್, ಸಹ ಕಾರ್ಯದರ್ಶಿ ಕೆ.ವಿ ಮಂಜುನಾಥ್, ಸಾಹಿತ್ಯ ಪರಿಷತ್ತಿನ ಸದಸ್ಯರು ಸರ್ವೋದಯ ಸಮಿತಿಯ ಅಧ್ಯಕ್ಷರು ಆದ ಅಂಬೆಕಲ್ ಕುಶಾಲಪ್ಪ ಉಪಸ್ಥಿತರಿದ್ದರು.