ಬೆಂಗಳೂರು: ಮುಡಾ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ೨೦೨೫ರ ಜನವರಿ ೨೫ ಕ್ಕೆ ಮುಂದೂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟಿನ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸಿಎಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ಎಸ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ನೇತೃತ್ವದ ಪೀಠ ನಡೆಸಿತು.
ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ನಮ್ಮ ಅಭಿಪ್ರಾಯದಿಂದ ವಿಚಾರಣೆ ಮೇಲೆ ಪರಿಣಾಮವಾಗಬಹುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ವಿ. ಅಂಜಾರಿಯಾ ಅಭಿಪ್ರಾಯಪಟ್ಟರು. ಬಳಿಕ ಸಿಎಂ ಮೇಲ್ಮನವಿ ಸೇರಿದಂತೆ ಪ್ರಕರಣದ ಸಿಬಿಐ ತನಿಖೆ ಕೋರಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಜನವರಿ ೨೫ಕ್ಕೆ ಮುಂದೂಡಿದರು.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಪ್ರಶ್ನಿಸಿ ಜಮೀನು ಮಾಲೀಕ ಜೆ.ದೇವರಾಜು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಕೂಡ ವಿಭಾಗೀಯ ಪೀಠ ಜನವರಿ ೨೫ಕ್ಕೆ ಮುಂದೂಡಿತು. ಮೇಲ್ಮನವಿಗಳಲ್ಲಿನ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿತು. ಸಿಎಂ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಜೆ. ದೇವರಾಜು ಪರ ಹಿರಿಯ ವಕೀಲ ದುಶ್ಯಂತ್ ದವೆ ವಾದ ಮಂಡಿಸಿದರು. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಜರಿದ್ದರು.