ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಾಠಿ ಚಾರ್ಜ್ ಖಂಡಿಸಿ ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಹಿನ್ನೆಲೆ ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಯುತ್ತಿದೆ. ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆ ನಡೆಯುತ್ತಿದೆ.
2ಎ ಮೀಸಲಾತಿಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಗೂಂಡಾ ವರ್ತನೆಯನ್ನು ಖಂಡಿಸಿ ಹೋರಾಟಗಾರರು ಬೀದಿಗಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಯಲ್ಲಿ ವಕೀಲರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಇನ್ನೂ ಅಥಣಿ ತಾಲೂಕಿನ ಗುಂಡೆವಾಡಿ ಗ್ರಾಮದಲ್ಲಿ ಜತ್ತ -ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಲಾಠಿ ಚಾರ್ಜ್ ನಡೆಸಿದ್ದಕ್ಕೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆಯನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕೋಡಿಯಲ್ಲಿ ಮಾತ್ರವಲ್ಲ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಇದಕ್ಕೆ ಕೈಜೋಡಿಸಿದ್ದಾರೆ.
ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಲು ಕಾರಣ:
ಇದೇ ಮಂಗಳವಾರ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಇದರಿಂದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದರು.