ವರದಿ:ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮೂಲ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಶಾಖೆಯ ವತಿಯಿಂದ ಸಾಲಿಗ್ರಾಮ ಪಟ್ಟಣದ ತಾಲೂಕು ಕಚೇರಿ ಮುಂಭಾಗ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಗ್ರಾಮ ಆಡಳಿತಾಧಿಕಾರಿ ಬಿ. ನಾಗರಾಜು ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 2024ರ ಸೆ. 26ರಿಂದ ಅ. 3 ರವರೆಗೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಅಕ್ಟೋಬರ್ 3ರಂದು ಸರಕಾರದ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಾ ಆಡಳಿತಾಧಿ ಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಸರಕಾರವು ವೃದ್ಧ ನೌಕರರ ಬೇಡಕೆಗಳ ವಿಚಾರವಾಗಿ ಯಾವುದೇ ತೃಪ್ತಿಕ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿಲ್ಲ. ಈ ಕಾರಣದಿಂದ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣ ಮಟ್ಟದ ಮೊಬೈಲ್ ಫೋನ್ (12 ಜಿಬಿ/256 ಜಿಬಿ) ಸಿಮುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಸೌಲಭ್ಯ ಕಲ್ಪಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನಿಗದಿಪಡಿಸಬೇಕು ಎಂದು ತಿಳಿಸಿದರು.
ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್.ಆರ್ ನಿಯಮ 16 ಎ ರ ಉಪಖಂಡ (2) ಅನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗ ಸೂಚಿಯನ್ನು ರಚಿಸುವ ಮೂಲಕ ನೌಕರರ ಕೌಟಂಬಿಕ ಸಮಸ್ಯೆ, ಸಣ್ಣ ಮಕ್ಕಳ, ಪೋಷಕರ ಪೋಷಣೆ ಮಾಡಲು, ಮಕ್ಕಳ ವಿದ್ಯಾಭ್ಯಾಸದ ಸಮಸ್ಯೆಗೆ ಹಾಗೂ ಪತಿ ಪತ್ನಿಯರ ನಡುವೆ ಬಿರುಕು ಮೂಡದೇ ಇರಲು ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು. ತಹಸೀಲ್ದಾರ್ ಎಸ್.ಎನ್ ನರಗುಂದ ಮನವಿ ಪತ್ರವನ್ನು ಸ್ವೀಕರಿಸಿ ಸರಕಾರಕ್ಕೆ ಕಳುಹಿಸಿ ಕೊಡಲಾಗುವುದೆಂದು ತಿಳಿಸಿದರು.
ಗೌರವ ಅಧ್ಯಕ್ಷ ರವೀಂದ್ರ ರಾವ್, ಮೌನಿಷ್, ಮುನಿರೆಡ್ಡಿ, ಶಿವಕುಮಾರ್, ಆರತಿ, ಅಶ್ವಿನಿ, ಮೇಘನಾ, ಪ್ರಿಯ ಕಾವೇರಿ, ತುಕರಾಮ್, ಶಶಿಕಾಂತ, ರಿಯಾನ ಸೇರಿದಂತೆ ಮತ್ತಿತರರು ಇದ್ದರು.