ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ. ಈ ವಿಷಯದಲ್ಲಿ ಸಾರ್ವಜನಿಕರು ಮೋಸ ಹೋಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ. ಪ್ರಸ್ತುತ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಸಾರ್ವಜನಿಕರಿಂದ ಕೆಲವು ಅನಾಮಧೇಯ ವ್ಯಕ್ತಿಗಳು ಹಣ ವಸೂಲು ಮಾಡುತ್ತಿರುವ ಬಗ್ಗೆ ಹಲವಾರು ದೂರುಗಳು ಕೇಳಿಬಂದಿದೆ. ಈ ಕುರಿತು ಪ್ರಸ್ತುತ ಸಾಕ್ಷ್ಯಾಧಾರಗಳು ಸಹ ಲಭ್ಯವಾಗಿದ್ದು, ಈ ಕುರಿತು ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸಾಕ್ಷ್ಯಾಧಾರ ಸಮೇತ ದೂರು ನೀಡಲಾಗಿದೆ ಎಂದು ಸಚಿವರು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಪ್ರಸ್ತುತ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಹಾಗೇನಾದರೂ ನೇಮಕಾತಿ ಇದ್ದಲ್ಲಿ ಸಕ್ಷಮ ಪ್ರಾಧಿಕಾರದ ಮೂಲಕವೇ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ನೇಮಕಾತಿ ಆಮಿಷಕ್ಕೆ ಒಳಗಾಗದೇ, ಯಾವುದೇ ಮಧ್ಯವರ್ತಿ ತಮ್ಮನ್ನು ನೇಮಕಾತಿ ಕುರಿತು ಸಂಪರ್ಕಿಸಿದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.