ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.16 ಮತ್ತು 17ರಂದು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಯುಜಿಸಿಇಟಿ)ಯ ಪರೀಕ್ಷಾಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಹತ್ತಿರದಲ್ಲಿರುವ ಎಲ್ಲಾ ಜೆರಾಕ್‌್ಸ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಬಂಧಕಾಜ್ಞೆ ವಿಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶಿಸಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ದೃಷ್ಟಿಯಿಂದ ಅವರು ಈ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಆಯುಕ್ತರುಗಳಿಗೆ ಸೂಕ್ತ ಪೊಲೀಸ್ ಭದ್ರತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪರೀಕ್ಷೆಗಳು ನಡೆಯುವ ಈ ಎರಡು ದಿನಗಳಂದು ಬೆಳಿಗ್ಗೆ 10 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೂ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 157 ಪರೀಕ್ಷಾ ಕೇಂದ್ರಗಳ ಸುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.