ಬೆಂಗಳೂರು : ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣದಡಿ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಾಲೇಜು ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡಿಗರ ಭಾವನೆಗೆ ತಕ್ಕೆ ತಂದಿದ್ದ ಸೋನು ನಿಗಮ್ ವಿರುದ್ಧ ಕನ್ನಡ ಪರ ಸಂಘಟನೆ ದೂರು ದಾಖಲಿಸಿದ್ದವು. ಈ ದೂರಿನ ಮೇಲೆ ಎಫ್ಐಆರ್ ದಾಖಲಿಸಿದ್ದ ಪೊಲೀಸರು, ವಿಚಾರಣೆ ಹಾಜರಾಗಲು ನೋಟಿಸ್ ಜಾರಿಗೊಳಿಸಿದ್ದರು. ಹೀಗಾಗಿ ತನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಸೋನು ನಿಗಮ್ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯು ನಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ರಜಾಕಾಲೀನ ಏಕಸದಸ್ಯ ಪೀಠದ ಮುಂದೆ ಇಂದು ವಿಚಾರಣೆಗೆ ನಿಗದಿಯಾಗಿದೆ. ಸೋನು ನಿಗಮ್ ಅರ್ಜಿಯಲ್ಲಿ ದೂರುದಾರ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಮತ್ತು ರಾಜ್ಯ ಸರ್ಕಾರವನ್ನು ಪ್ರತಿವಾದ ಮಾಡಲಾಗಿದೆ.