ಹನೂರು: ಸಮಾಜದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸಲು ಸೂಕ್ತ ಕಾನೂನಿನ ಅರಿವು ಮತ್ತು ಜಾಗೃತಿ ಅವಶ್ಯಕತೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ರವರು ತಿಳಿಸಿದರು.
ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಜನ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು ಹನೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಪದ್ಧತಿಯನ್ನು ನಿಷೇಧ ಮಾಡುವ ಉದ್ದೇಶದಿಂದ 2004 ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕಾನೂನು ರೂಪಿಸಲಾಗಿದೆ. ಇದನ್ನು ಸಂಪೂರ್ಣ ತಡೆಗಟ್ಟುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಾದ ನೀವೆಲ್ಲರೂ ನಿಮ್ಮ ಅಕ್ಕಪಕ್ಕದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದರೆ ಅದನ್ನು ಖಂಡಿಸುವ ಹೊಣೆಗಾರಿಕೆ ನಿಮ್ಮದಾಗಿದೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ಮಾನಸಿಕ, ನೈತಿಕ ಸಾಮಾಜಿಕ ಬದುಕು ನಾಶವಾಗುತ್ತಿದೆ. ಆದ್ದರಿಂದ ಸರ್ಕಾರ ಪೋಕ್ಸೋ ಕಾಯ್ದೆ ಜಾರಿಮಾಡಿದೆ. ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಕಾನೂನಿನ ಬಗ್ಗೆ ತಿಳುವಳಿಕೆ ಮುಖ್ಯವಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಪ್ರಜ್ಞೆ ಇರಬೇಕಾಗಿದೆ.
ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಲು ಮಾದಕ ವಸ್ತು ಸೇವನೆಯನ್ನು ಸಂಪೂರ್ಣ ನಿಷೇಧಿಸಬೇಕಾಗಿದೆ. ಜನರು ಸಾಧ್ಯವಾದಷ್ಟು ಮಾದಕ ವ್ಯಸನಗಳಿಂದ ದೂರ ಇರುವಂತೆ ಸಮಾಜಕ್ಕೆ ತಿಳುವಳಿಕೆ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಸಿವಿಲ್ ನ್ಯಾಯಾಧೀಶರಾದ ರಘು ಸಿ.ಜೆ, ವಕೀಲರ ಸಂಘದ ಅಧ್ಯಕ್ಷರಾದ ಡಿ. ಎಸ್. ಬಸವರಾಜು, ವಕೀಲರ ಸಂಘದ ಕಾರ್ಯದರ್ಶಿ ಮೋಹನ್ ಕುಮಾರ್ ಎಂ, ವಿವೇಕಾನಂದ ಪದಪೂರ್ವ ಕಾಲೇಜಿನ ಕಾರ್ಯದರ್ಶಿ ಸುರೇಶ್ ನಾಯ್ಡು, ಪ್ರಾಂಶುಪಾಲರಾದ ಮಧುಸೂದನ್ ಜಿ, ಮುಖ್ಯ ಶಿಕ್ಷಕರಾದ ಸತ್ಯಪ್ರಿಯ, ವಕೀಲರಾದ ಅಶೋಕ್ ಕುಮಾರ್, ನಂದನ್ ಕುಮಾರ್, ವಿವೇಕಾನಂದ ಶಿಕ್ಷಣ ಸಂಸ್ಥೆ ಸಂಚಾಲಕ ರಾಜೇಂದ್ರ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು