ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕುರಿತು ಅಪಮಾನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಇಂದು ಎಫ್‌ಐಆರ್ ದಾಖಲಾಗಿದೆ.
ಜೆ.ಪಿ.ನಗರದ ನಿವಾಸಿ, ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಗರ್ತನಾ ಅವರು ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಸಂಬಂಧ ಎನ್.ರವಿಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 1ರಂದು ವಿಧಾನಸೌಧ ಆವರಣದಲ್ಲಿ ಬಿಜೆಪಿ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುತ್ತಾ ರವಿಕುಮಾರ್ ಅವರು ಶಾಲಿನಿ ರಜನೀಶ್ ಅವರನ್ನು ಕುರಿತು ಅಮಾನವೀಯ ಪದ ಬಳಸಿ ಮಾತನಾಡಿದ್ದಾರೆ. ಅವರ ಹೇಳಿಕೆಯು ಮುಖ್ಯಕಾರ್ಯದರ್ಶಿ ಹುದ್ದೆಗೆ ಅಗೌರವ ತಂದಿದೆ. ಶಾಲಿನಿ ಅವರ ಗೌರವಕ್ಕೆ ಕುಂದುಂಟು ಮಾಡಿ ಇಡೀ ಮಹಿಳಾ ಕುಲಕ್ಕೆ ಅಗೌರವ ತೋರಿದಂತೆ ಆಗಿದೆ. ರವಿಕುಮಾರ್ ಅವರ ಮಾತು ಲೈಂಗಿಕ ಅರ್ಥ ಛಾಯೆ ಬರುವ ಮಾತಾಗಿದೆ. ಮುಖ್ಯಕಾರ್ಯದರ್ಶಿಯವರ ಖ್ಯಾತಿಗೆ ಹಾನಿ ಉಂಟು ಮಾಡಿದೆ ಎಂದು ದೂರು ಆಧರಿಸಿ ಎಫ್ ಐ ಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎನ್.ಮನೋಹರ್ ಅವರೂ ಎನ್.ರವಿಕುಮಾರ್ ಅವರ ವಿರುದ್ಧ ಬುಧವಾರ ದೂರು ನೀಡಿದ್ದರು.