ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮುಂದಿನ ಮೂರು ದಿನ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 18 ಮತ್ತು 19 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್ ಅಲರ್ಟ್’ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಹಾಸನ ಜಿಲ್ಲೆಗೆ ಜು.18 ರಂದು ಆರೆಂಜ್ ಮುನ್ನೆಚ್ಚರಿಕೆ ನೀಡಿದ್ದು, ಜಿಲ್ಲೆಯ ಕೆಲವೊಂದು ಭಾಗಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದ್ದು, ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸಿ ಕೆರೆ-ಕಟ್ಟೆ ಹಾಗೂ ನದಿ ಪಾತ್ರಗಳ ಹತ್ತಿರ ಜನರು ಹೋಗದಿರಲು ಹಾಗೂ ಜಾನುವಾರುಗಳನ್ನು ಬಿಡದಿರಲು ಕೋರಿದೆ.
ಜಿಲ್ಲೆಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಹಾಗೂ ಜಿಲ್ಲೆಯಾ ನದಿಗಳಲ್ಲಿ ನೀರಿನ ಹರಿಯುವಿಕೆ ಹೆಚ್ಚಾಗುವುದರಿಂದ ನದಿಪಾತ್ರಗಳ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ತಿಳಿಸಿದೆ. ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಿರುವAತೆ ಸಹಕರಿಸಲು ಕೋರಿದೆ.
ತುರ್ತು ಸಂದರ್ಭಗಳಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ದೂರವಾಣಿ ಸಂಖ್ಯೆ: 08172-261111 ಹಾಗೂ ಉಚಿತ ಸಹಾಯವಾಣಿ 1077 ಗೆ ಕರೆ ಮಾಡಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.