ರಾಮನಗರ: ರೈತರಿಗೆ ಹವಾಮಾನದ ಕುರಿತು ನಿಖರ ಮಾಹಿತಿ ಬೇಕಾದಲ್ಲಿ ಸ್ವರ್ಣಮಿತ್ರ ಎಂಬ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಈ ಕುರಿತು ಅಧಿಕಾರಿಗಳು ರೈತರಿಗೆ ಮಾಹಿತಿ ನೀಡಿ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ನೋಂದಣಿ & ಮುದ್ರಾಂಕ, ಭೂಮಿ ಮತ್ತು ಯುಪಿಓಆರ್) ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2022-23 ಮತ್ತು 2023-24ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮದುವೆ ನೋಂದಣಿ ಪ್ರಮಾಣ ಪತ್ರಕ್ಕೆ ನೋಂದಣಿ ಕಚೇರಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಮದುವೆ ನೋಂದಣಿ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದರು.
ಸರ್ಕಾರದ ಸೌಲಭ್ಯಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಅವರಿಗೆ ಸೌಲಭ್ಯಗಳನ್ನು ಸಿಗುವಂತೆ ಕೆಲಸ ನಿರ್ವಹಿಸಿ ಎಂದರು. ಆಸ್ಪತ್ರೆ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚತೆ ಕಾಪಾಡಬೇಕು, ಆಸ್ಪತ್ರೆ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳ ಕಟ್ಟಡಗಳನ್ನು ಪರಿಶೀಲಿಸಿ, ಒಂದು ವೇಳೆ ದುರಸ್ಥಿ ಮಾಡಬೇಕಾದರೆ ಕೂಡಲೇ ದುರಸ್ಥಿ ಮಾಡಲು ಕ್ರಮ ವಹಿಸಿ ಎಂದರು.
ಶಿಕ್ಷಣ, ಬೆಳೆನಷ್ಟಕ್ಕೆ ಪರಿಹಾರ, ಕೊಳವೆ ಬಾಯಿಗಳ ನಿರ್ಮಾಣ, ಕೃಷಿ, ರೇಷ್ಮೆ, ಶಿಕ್ಷಕರ ನೇಮಕ ಹಾಗೂ ಗುಣಮಟ್ಟದ ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಕೊರತೆಯಿದ್ದು, ಇದು ಸಕಾಲದಲ್ಲಿ ಕೆಲವು ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅನ್ಯ ಕರ್ತವ್ಯದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಮಾತೃ ಇಲಾಖೆಗೆ ವಾಪಾಸ್ ಪಡೆಯಲು ಸಂಬoಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.
ನಂತರ ಮಾಯಗಾನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ವಿದ್ಯಾಶಾಲೆ, ಮಂಚನಾಯಕನಹಳ್ಳಿ ಗ್ರಾಮ ಒನ್ ಕೇಂದ್ರ ಹಾಗೂ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪಂಚಾಯತ್‌ನ ಮುಖ್ಯಯೋಜನಾ ನಿರ್ದೇಶಕರಾದ ಚಿಕ್ಕ ಸುಬ್ಬಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಸ್ಥಿತರಿದ್ದರು.