ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 1 ರವರೆಗೆ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 30 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ, ಮಲೆನಾಡು, ಒತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ನಗರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ. ಅತ್ತ ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್ 28 ರಿಂದ ಆಗಸ್ಟ್ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಲಿದೆ. ಗಾಳಿಯ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯ ನಡುವೆ ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇವಾಲಯದ ಬಳಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿ 30 ಜನರ ಸಾವಾಗಿದೆ. ಘಟನೆಯಲ್ಲಿ ಇನ್ನೂ 23 ಜನರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಸಂತ್ರಸ್ತರನ್ನು ಪತ್ತೆಹಚ್ಚಲು ಮತ್ತು ಸಹಾಯ ಮಾಡಲು ಹಲವಾರು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ಇದಕ್ಕೂ ಮುನ್ನ ನಿನ್ನೆ ತಡರಾತ್ರಿಯಿಂದ ಈ ಪ್ರದೇಶದಲ್ಲಿ ಭಾರೀ ಮತ್ತು ನಿರಂತರ ಮಳೆಯಾದ ಕಾರಣ ಮಾತಾ ವೈಷ್ಣೋದೇವಿಯ ಪವಿತ್ರ ದೇವಾಲಯಕ್ಕೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ (SMVDSB) ಅಧಿಕಾರಿಗಳ ಪ್ರಕಾರ, ಮಳೆ ಹೆಚ್ಚಾದ ನಂತರ ಮೊದಲು ಮುಚ್ಚಲ್ಪಟ್ಟ ಮಾರ್ಗವೆಂದರೆ ಹಿಮಕೋಟಿ ಮಾರ್ಗ. ಹವಾಮಾನ ಸುಧಾರಿಸದ ಕಾರಣ, ಮಂಡಳಿಯು ಕೆಲವು ಗಂಟೆಗಳ ಕಾಲ ಸಂಪೂರ್ಣ ಯಾತ್ರೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿತು.