ಮಂಗಳೂರು (ದಕ್ಷಿಣ ಕನ್ನಡ): ಮಹಿಳೆಯೊಬ್ಬರು ವಾಹನದ ಜತೆ ಗುಂಡಿಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ಮಂಗಳೂರಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಮೆರವಣಿಗೆ ಹಾಗೂ ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು.
ಪ್ರತಿಭಟನೆಯ ವೇಳೆ ಅಣಕು ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆಯ ಮೂಲಕ ನಂತೂರು ಸಮೀಪದ ಎನ್‌ಎಚ್‌ಎಐ ಕಚೇರಿಗೆ ಸಾಗಿದ ಪ್ರತಿಭಟನಾಕಾರರು ಅಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ನ ನಡುವೆ ಮುತ್ತಿಗೆ ಯತ್ನ ನಡೆಸಿದಾಗ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಎನ್‌ಎಸ್‌ಯುಐ ಅಧ್ಯಕ್ಷ ಸುಹಾನ್ ಆಳ್ವ ಸೇರಿದಂತೆ ಇತರ ನಾಯಕರನ್ನು ವಶಕ್ಕೆ ಪಡೆದರು. ಆರಂಭದಲ್ಲಿ ನಂತೂರು ವೃತ್ತ ಬಳಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.