ವರದಿ: ಸ್ಟೀಫನ್ ಜೇಮ್ಸ್
ಸೆಪ್ಟೆಂಬರ್ 15 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಹಿಡಿದು ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಂದು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಬಹುದು.
ಸೆಪ್ಟೆಂಬರ್ 15 ಮತ್ತು 16 ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಅಂದ್ರೆ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ದಕ್ಷಿಣ ಒಳನಾಡು ಅಂದ್ರೆ ಬೆಂಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಸೆಪ್ಟೆಂಬರ್ 17 ರಂದು ಕರಾವಳಿ ಭಾಗದ ಜಿಲ್ಲೆಗಳಿಗೆ ಸಾಧಾರಣ ಮಳೆಯ ನಿರೀಕ್ಷೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಂದ್ರೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 18 ಕ್ಕೆ ಕರಾವಳಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಸೇರಿದಂತೆ ದಕ್ಷಿಣ ಒಳನಾಡಿನ ಬಹುಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.
ಸೆಪ್ಟೆಂಬರ್ 19 ಮತ್ತು 20 ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆ ಇದೆ. ಬೆಂಗಳೂರಿನ ನಗರ ಹಾಗೂ ಗ್ರಾಮಾಂತರ ಭಾಗಗಳ ಜೊತೆಗೆ ಬಳ್ಳಾರಿ, ಮೈಸೂರು, ಚಿತ್ರದುರ್ಗ ಜಿಲ್ಲೆಗಳು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಹೆಚ್ಚಿದೆ.