ಮಡಿಕೇರಿ: ಮತ್ತು ಮಹಿಳೆಯರ ಮೇಲೆ ನಡೆಯುವ ನಿರಂತರ ಶೋಷಣೆ, ದೌರ್ಜನ್ಯ, ಹಿಂಸೆ ನಿಲ್ಲಬೇಕು. ಜೊತೆಗೆ ಮಕ್ಕಳನ್ನು ಬಿಕ್ಷಾಟನೆ, ದುಡಿಮೆಗೆ ದೂಡುವುದು ತಪ್ಪಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾರ್ಮಿಕ, (ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ), ಪೊಲೀಸ್, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ‘ಮಾನವ ಕಳ್ಳ ಸಾಗಾಣಿಕೆ ತಡೆ’ ಕುರಿತು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಸ್ಥಾನ ನೀಡಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳು ಮಹಿಳೆಯರು ಮತ್ತು ಮಕ್ಕಳಿಗೆ ತಲುಪಬೇಕು. ಮಹಿಳೆಯರು ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ನುಡಿದರು.
ಮಕ್ಕಳ ಕಳ್ಳ ಸಾಗಾಣಿಕೆ ತಡೆಯುವಲ್ಲಿ ಎಲ್ಲರೂ ಎಚ್ಚರವಹಿಸಬೇಕಿದೆ. ಕೊಡಗು ಜನಸಂಖ್ಯೆಯಲ್ಲಿ ಚಿಕ್ಕ ಜಿಲ್ಲೆಯಾದರೂ ಸಹ ನಾಪತ್ತೆ, ಕಳ್ಳ ಸಾಗಾಣಿಕೆ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿವೆ ಎಂದರು.
ಮಾನವ ಕಳ್ಳ ಸಾಗಾಣಿಕೆ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಮಾಹಿತಿ ನೀಡುವಂತಾಗಬೇಕು. ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವಂತಾಗಬೇಕು ಎಂದರು.
ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ಶೋ?ಣೆಯ ವಿರುದ್ಧದ ಹಕ್ಕು, ಉಚಿತ ಶಿಕ್ಷಣ ಪಡೆಯುವ ಹಕ್ಕು, ಸರ್ಕಾರ ನೀಡಿರುವಂತಹ ಸೌಲಭ್ಯಗಳನ್ನೂ ಪಡೆಯುವ ಹಕ್ಕು ಇವೆಲ್ಲವನ್ನೂ ಮಹಿಳೆಯರು ಮತ್ತು ಮಕ್ಕಳಿಗೆ ತಲುಪುವಂತೆ ಮಾಡಬೇಕು. ಇದರಿಂದ ಮಾನವ ಕಳ್ಳಸಾಗಣೆ ತಡೆಯಬಹುದಾಗಿದೆ ಎಂದರು.
‘ಮಕ್ಕಳ ವಿಶೇಷ ಪೊಲೀಸ್ ಘಟಕದ ಹೆಡ್ ಕಾನ್ಸ್‌ಟೇಬಲ್ ಸುಮತಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕಳೆದ ೬ ತಿಂಗಳಲ್ಲಿ ಕಾಣೆಯಾದ ೩೧ ಮಕ್ಕಳ ಪ್ರಕರಣಗಳು ದಾಖಲಾಗಿದ್ದು, ೩೧ ರಲ್ಲಿ ೨೮ ಮಕ್ಕಳನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಲಾಗಿದೆ. ಉಳಿದ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.’
ಮಹಿಳೆಯರು ಕೆಲಸದಲ್ಲಿ ಶೋಷಣೆ, ವಂಚನೆಗೆ ಒಳಪಡುವುದು ಹೆಚ್ಚಾಗಿ ಕಂಡು ಬರುತ್ತದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು. ಮಹಿಳೆಯರು ಆಸೆ ಆಮಿಷಗಳಿಗೆ ತುತ್ತಾಗದೆ ಪ್ರಶ್ನೆ ಮಾಡುವ ಮತ್ತು ವಿಮರ್ಶಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವಿರಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅವರು ಮಾನವ ಕಳ್ಳ ಸಾಗಾಣಿಕೆಯಿಂದ ತಡೆಯಲು, ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ ಒಳಪಟ್ಟವರಿಗೆ ಸೂಕ್ತ ನ್ಯಾಯ ಒದಗಿಸಲು ಮುಡುಪಾಗಿಡಬೇಕು. ಸಂವಿಧಾನದಲ್ಲಿ ನೀಡಿರುವ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಮನಸ್ಸು ಇರಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಎಂ.ವೈ.ಮೈಮೂನ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ, ಸಿಡಿಪಿಒ ಸೀತಾಲಕ್ಷ್ಮಿ, ವಕೀಲರಾದ ಕೆ.ಆರ್.ವಿದ್ಯಾಧರ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹೆಡ್‌ಕಾನ್ಸ್‌ಟೇಬಲ್ ಮಹೇಶ್ ಕುಮಾರ್, ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಸಿರಾಜ್ ಅಹಮದ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಇತರರು ಇದ್ದರು.