ಬೆಳಗಾವಿ: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಒಳ ಮೀಸಲಾತಿ ಅಡಿಯಲ್ಲಿ ಬಡ್ತಿಯ ವಿಚಾರದ ಜೊತೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಗ್ರೀನ್ ಸಿಗ್ನಲ್ ನೀಡುವ ಮೂಲಕ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಆ ಮೂಲಕ ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಾಲ್ತುಳಿತ ದುರಂತ ಬಳಿಕ ಸ್ಟೇಡಿಯಂನಲ್ಲಿ ಪಂದ್ಯಗಳು ನಡೆದಿರಲಿಲ್ಲ. ಆದರೆ, ಇದೀಗ ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ವರದಿ ಆಧರಿಸಿ ಕ್ರಿಕೆಟ್ ಪಂದ್ಯಗಳನ್ನು ಆಡಿಸಲು ಸರ್ಕಾರ ಅನುಮತಿ ನೀಡಿದೆ.
ಇನ್ನೂ ಮ್ಯಾಚ್ ನಡೆಯುವ ಸಂದರ್ಭದಲ್ಲಿ ಭದ್ರತೆ ಒದಗಿಸುವ ಬಗ್ಗೆ ಗೃಹ ಇಲಾಖೆ ಜೊತೆಗೆ ಕೆಎಸ್‌ಸಿಎ ಚರ್ಚೆಗೆ ಸೂಚನೆ ನೀಡಿದ್ದು, ಕೆಎಸ್ಸಿಎಗೆ ಕೆಲವು ಷರತ್ತುಗಳನ್ನು ವಿಧಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಗೃಹ ಇಲಾಖೆ ಸೂಚಿಸುವ ಷರತ್ತು ನಿಬಂಧನೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಸೂಚಿಸಲಿದೆ.
ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ಕೆಎಸ್‌ಸಿಎ ಪದಾಧಿಕಾರಿಗಳಿಗೆ ತಿಳಿಸಿರುವುದಾಗಿ ಡಿಕೆಶಿ ಹೇಳಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ (IPL 2025) ಚಾಂಪಿಯನ್ ಆದ ಬಳಿಕ, ಈ ಕ್ರೀಡಾಂಗಣದಲ್ಲಿ ಜೂನ್ 4ರಂದು ಅಭಿನಂದನೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರೀಕ್ಷೆಗೂ ಮೀರಿದ ಜನ ಸಾಗರ ಹರಿದು ಬಂದಿದ್ದರಿಂದ ನೂಕು ನುಗ್ಗುಲು ಉಂಟಾಗಿ ಕಾಲ್ತುಳಿತ ಉಂಟಾಗಿತ್ತು. ಇದರಲ್ಲಿ 12 ಮಂದಿ ಮೃತಪಟ್ಟಿದ್ದರು. ಅಂದಿನಿಂದ ಈ ಅಂಗಣದಲ್ಲಿ ಪಂದ್ಯಗಳು ನಡೆಯುತ್ತಿಲ್ಲ. ಆದರೆ, ಇದೀಗ ಸ್ಡೇಡಿಯಂನಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.



