ಬೆಂಗಳೂರು: ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದಿದ್ದಾರೆ.
ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ ಎಂದು ಕಿಡಿಕಾರಿದರು. ಮುಂಬರುವ 27 ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದರು.
ಇನ್ನೂ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ ಸಭೆ ಕರೆದಿದ್ದಾರೆ. ಅಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ ಎಂದರು.
ಸರ್ಕಾರ ಮತ್ತು ಪಕ್ಷ ಒಟ್ಟಾಗಿ ನರೇಗಾ ಯೋಜನೆಯ ವಿರುದ್ದ ಕೇಂದ್ರ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ತೀರ್ಮಾನ ವಿರೋಧಿಸಿ ಹೋರಾಟ ಮಾಡುತ್ತೇವೆ. ಇದು ರಾಷ್ಟ್ರೀಯ ವಿಚಾರ. ಈ ದೇಶದ ಗ್ರಾಮ ಪಂಚಾಯತಿಗಳನ್ನು ಸುಭದ್ರಗೊಳಿಸಿದ್ದು ಕಾಂಗ್ರೆಸ್ ಸರ್ಕಾರ. ರಾಜೀವ್ ಗಾಂಧಿ ಅವರು ತಂದ 73,74 ನೇ ತಿದ್ದುಪಡಿ ಮೂಲಕ ಅಧಿಕಾರ ವಿಕೇಂದ್ರೀಕರಣ ಮಾಡಿದರು ಎಂದು ಹೇಳಿದರು.
ಇದರ ವಿರುದ್ಧ ಜನಾಭಿಪ್ರಾಯ ರೂಪಿಸಲಾಗುವುದು. ಅನ್ಯಾಯದ ಬಗ್ಗೆ ತಿಳಿಸಲಾಗುವುದು. ಹೆಸರು ಬದಲಾವಣೆ ತೀರ್ಮಾನವನ್ನು ವಾಪಸ್ ಪಡೆಯುವ ತನಕ ಹೋರಾಟ ನಡೆಸಲಾಗುವುದು. ಕಾಂಗ್ರೆಸ್ ಪಕ್ಷ ದೇಶದ ಜನಸಾಮಾನ್ಯರ ಪರವಾಗಿ ನಿಲ್ಲಲಿದೆ. ಜನರ ಹಕ್ಕನ್ನು ಕಾಪಾಡುವುದು ನಮ್ಮ ಕರ್ತವ್ಯ. ಚುನಾವಣೆಗಳು ಬರುತ್ತವೆ ಹೋಗುತ್ತವೆ. ಸೋಲು, ಗೆಲುವು ಇದ್ದಿದ್ದೆ ಎಂದರು.
ಇಡೀ ಭಾರತದಲ್ಲಿಯೇ ನನ್ನ ಕನಕಪುರ ಕ್ಷೇತ್ರ ಅತಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಿದ ಕ್ಷೇತ್ರ. ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ತನಿಖಾ ತಂಡವನ್ನು ಕಳುಹಿಸಿತು. ಹತ್ತಾರು ನಿಯೋಗ ಬಂದಿತು. 250-300 ಕೋಟಿ ರೂಪಾಯಿ ಕೆಲಸವನ್ನು ನರೇಗಾ ಮೂಲಕ ಮಾಡಲಾಗಿತ್ತು. 50 ಸಾವಿರ ದನದ ಕೊಟ್ಟಿಗೆಗಳನ್ನು ಕಟ್ಟಲಾಗಿತ್ತು. ಶಾಲಾ ಕಟ್ಟಡ, ಜಮೀನು ಮಟ್ಟ ಮಾಡುವುದು, ಕೃಷಿ ಹೊಂಡ ನಿರ್ಮಾಣ, ನೂರಾರು ಚೆಕ್ ಡ್ಯಾಂಗಳನ್ನು ನಿರ್ಮಾಣ ಮಾಡಲಾಯಿತು. ಇಲ್ಲಿನ ಕೆಲಸಗಳನ್ನು ನೋಡಿ ನನಗೆ ಎಲ್ಲಿ ಪ್ರಶಸ್ತಿ ನೀಡಬೇಕಾಗುತ್ತದೋ ಎಂದು ಕ್ಷೇತ್ರದ ತಾಲ್ಲೂಕು ಪಂಚಾಯತಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿದರು ಎಂದು ತಿಳಿಸಿದರು.
ಪ್ರತಿಯೊಂದು ಪಂಚಾಯತಿಯಲ್ಲಿಯೂ ಯಾವ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚೆ ನಡೆಸಿ ಕೈಗೆತ್ತಿಕೊಳ್ಳಲಾಗುತ್ತಿತ್ತು. ಪ್ರತಿದಿನ ಎನ್ ರೋಲ್ ಮೆಂಟ್ ಇರುತ್ತಿತ್ತು. ಎಷ್ಟು ಮಾನವದಿನ ಕೆಲಸ ನೀಡಬಹುದು ಎಂದು ಯೋಜಿಸಲಾಗುತ್ತಿತ್ತು. ಈಗಿನ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಕೂಲಿ ಹಣವನ್ನೇ ನೀಡುತ್ತಿಲ್ಲ ಎಂದರು.
ಈ ಮೊದಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮವಾಗಿ ಶೇ 90:10 ಅನುಪಾತದಲ್ಲಿ ಅನುದಾನ ನೀಡಬೇಕಿತ್ತು. ಈಗ ಶೇ 60:40 ಅನುಪಾತ ತಂದು ಈ ಯೋಜನೆಯನ್ನು ಸಾಯಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ಅವರ ಹೆಸರಿನಲ್ಲಿರುವ ಯೋಜನೆಯನ್ನು ಕೊಲೆ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ. ದೇಶದ ಎಲ್ಲಾ ಪ್ರಜಾ ಪ್ರತಿನಿಧಿಗಳಿಗೆ ಶಾಕಿಂಗ್ ವಿಚಾರ ಎಂದರು.



